ಶೀಘ್ರವೇ ನಿಗಮ, ಮಂಡಳಿಗಳಿಗೆ ಸದಸ್ಯರ ನೇಮಕ: ಡಾ.ಜಿ. ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿರುವ ನಿಗಮ, ಮಂಡಳಿಗಳಿಗೆ ಸದಸ್ಯರನ್ನಾಗಿ ನಮ್ಮ ಪಕ್ಷದ ಕಾರ್ಯಕರ್ತರನ್ನು ನೇಮಕ ಮಾಡುವ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಬುಧವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ರಣದೀಪ್ ಸಿಂಗ್ ಸುರ್ಜೆವಾಲಾರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ, ಮಂಡಳಿಗಳಿಗೆ ನೇಮಕ ಮಾಡಲು ನಮ್ಮ ಕಾರ್ಯಕರ್ತರ ಪಟ್ಟಿಯನ್ನು ನೀಡುವಂತೆ ನನಗೆ ಪಕ್ಷ, ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಜವಾಬ್ದಾರಿ ನೀಡಿದ್ದರು ಎಂದು ಹೇಳಿದರು.
ಅದರಂತೆ, ನನ್ನ ನೇತೃತ್ವದ ಸಮಿತಿಯು ಒಂದು ಪಟ್ಟಿಯನ್ನು ಸಿದ್ಧಪಡಿಸಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗೆ ನೀಡಿತ್ತು. ಈಗ ಅದರ ಬಗ್ಗೆ ರಾಜ್ಯ ಉಸ್ತುವಾರಿ, ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಎಲ್ಲರೂ ಸೇರಿ ಚರ್ಚೆ ಮಾಡಿ, ಕಾರ್ಯಕರ್ತರಿಗೆ ಜವಾಬ್ದಾರಿ ನೀಡಲು ತೀರ್ಮಾನಿಸಲಿದ್ದಾರೆ. ಸಮಿತಿಯ ಅಧ್ಯಕ್ಷನಾಗಿದ್ದ ನನ್ನನ್ನು ಕರೆಸಿ ಮಾತುಕತೆ ನಡೆಸಿದ್ದಾರೆ. ನನ್ನ ಬಳಿ ಇದ್ದ ಮಾಹಿತಿಯನ್ನು ಸುರ್ಜೆವಾಲಾ ಅವರಿಗೆ ತಿಳಿಸಿದ್ದೇನೆ ಎಂದು ಪರಮೇಶ್ವರ್ ತಿಳಿಸಿದರು.







