ಅರ್ಜುನ ಆನೆ ಸಾವು ಪ್ರಕರಣ: ಸಂಪೂರ್ಣ ತನಿಖೆಗೆ ಸಿಎಂ ಸೂಚನೆ

ಅರ್ಜುನ
ಬೆಂಗಳೂರು, ಡಿ.6: ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದ ಆನೆ ಅರ್ಜುನ ಸಾವೀಗೀಡಾಗಿರುವುದು ದುರದೃಷ್ಟಕರ. ಘಟನೆ ಬಗ್ಗೆ ಸಂಪೂರ್ಣ ತನಿಖೆ ಮಾಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರಿಂದು ಡಾ: ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಅರ್ಜುನ ಆನೆ ಪ್ರಾಣ ಕಳೆದುಕೊಂಡ ಸ್ಥಳದಲ್ಲೇ ಸ್ಮಾರಕ ನಿರ್ಮಾಣ ಮಾಡಲಾಗುವುದು ಹಾಗೂ ಹೆಗ್ಗಡದೇವನಕೋಟೆಯಲ್ಲೂ ಸ್ಮಾರಕವಾಗಬೇಕೆಂದು ಸೂಚಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದರು.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿಯ ದಬ್ಬಳಿಕಟ್ಟೆ ಅರಣ್ಯದಲ್ಲಿ ಸೋಮವಾರ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಅರ್ಜುನ ಆನೆಯು ಒಂಟಿ ಸಲಗದ ದಾಳಿಗೆ ಸಿಲುಕಿ ಸಾವನ್ನಪ್ಪಿದೆ ಎಂದು ಹೇಳಲಾಗಿದೆ. ಆದರೆ ಬಳಿಕ ಕಾರ್ಯಾಚರಣೆಯಲ್ಲಿನ ಲೋಪ, ಅದೇರೀತಿ ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡು ಕಾಲಿಗೆ ತಗುಲಿದ್ದರಿಂದ ಅರ್ಜುನ ಒಂಟಿ ಸಲಗದ ದಾಳಿಗೆ ಸಿಲುಕಿ ಸಾವನ್ನಪ್ಪಿದೆ ಎಂಬ ಆರೋಪ ಕೇಳಿಬಂದಿದೆ.





