ಸಿಎಂ ಭರವಸೆಗೂ ಮಣಿಯದ ಆಶಾ ಕಾರ್ಯಕರ್ತೆಯರು: ʼಲಿಖಿತ ಭರವಸೆ ಸಿಗುವವರೆಗೂ ಹೋರಾಟʼ

ಬೆಂಗಳೂರು : ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಗುರುವಾರ ಸಿಎಂ ಡಿ.ಕೆ.ಶಿವಕುಮಾರ್ ಚರ್ಚಿಸಿದ್ದು, ಅಧಿವೇಶನದ ವೇಳೆಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಆದರೆ, ಹಿಂದಿನ ಭರವಸೆಗಳು ಈಡೇರದ ಹಿನ್ನೆಲೆಯಲ್ಲಿ ಈ ಬಾರಿಯೂ ಮಾತಿನ ಭರವಸೆಗೆ ಒಪ್ಪದ ಆಶಾಗಳು, ಲಿಖಿತ ಭರವಸೆ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ರಾಜ್ಯದಲ್ಲಿ ಸುಮಾರು 41 ಸಾವಿರ ಆಶಾ ಕಾರ್ಯಕರ್ತೆಯರಿದ್ದಾರೆ. ಪ್ರಸ್ತುತ ರಾಜ್ಯ ಸರಕಾರದಿಂದ 5ಸಾವಿರ ರೂ. ಹಾಗೂ ಕೇಂದ್ರ ಸರಕಾರದಿಂದ 2ಸಾವಿರ ರೂ.ನೀಡಲಾಗುತ್ತಿದೆ. ಇದರೊಂದಿಗೆ ರಾಜ್ಯ ಸರಕಾರದಿಂದ 1 ಸಾವಿರ ರೂ.ಪ್ರೋ ತ್ಸಾಹಧನವನ್ನೂ ನೀಡಲಾಗುತ್ತಿದೆ’ ಎಂದು ತಿಳಿಸಿದರು.
ಕೇಂದ್ರ ಸರಕಾರ ಗೌರವಧನ ಹೆಚ್ಚಿಸಿದರೆ ರಾಜ್ಯವೂ ಅದಕ್ಕೆ ಅನುಗುಣವಾಗಿ ಹೆಚ್ಚಳ ಮಾಡಲಿದೆ ಎಂಬ ಒಪ್ಪಂದವಿತ್ತು. ಆದರೆ ಕೇಂದ್ರ ಸರಕಾರ ಕೇವಲ 2 ಸಾವಿರ ರೂ. ನೀಡುತ್ತಿದೆ. ಆಶಾ ಕಾರ್ಯಕರ್ತೆಯರು 15 ಸಾವಿರ ರೂ. ಗೌರವಧನ ನೀಡುವಂತೆ ಬೇಡಿಕೆ ಸಲ್ಲಿಸಿದ್ದಾರೆ. ಆಶಾ ಕಾರ್ಯಕರ್ತೆಯರು ಕಷ್ಟಪಟ್ಟು ದುಡಿಯುತ್ತಿದ್ದಾರೆ ಎಂದು ಅವರು ಹೇಳಿದರು.
ಆಶಾಗಳ ಬಗ್ಗೆ ಸರಕಾರಕ್ಕೆ ಸಹಾನುಭೂತಿಯಿದೆ. ಹಣಕಾಸು ಇಲಾಖೆ ಹಾಗೂ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ, ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಿಧಾನಸಭೆ ಅಧಿವೇಶನದ ವೇಳೆಗೆ ತೀರ್ಮಾನ ಕೈಗೊಳ್ಳುತ್ತೇವೆ. ನಮ್ಮ ಮೇಲೆ ವಿಶ್ವಾಸವಿಟ್ಟು ಪ್ರತಿಭಟನೆ ಹಿಂತೆಗೆದುಕೊಂಡು ಮನೆಗೆ ತೆರಳಿ. ನಿಮಗೆ ಯಾವ ರೀತಿಯಲ್ಲಿ ನೆರವು ನೀಡಬಹುದು ಎಂಬುದನ್ನು ಚರ್ಚಿಸಿ ನಿರ್ಧರಿಸುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.
ಆಯೋಗದ ಅಧ್ಯಕ್ಷೆ ಎದುರು ಆಕ್ರೋಶ: ಧರಣಿ ಸ್ಥಳಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಆಗಮಿಸುತ್ತಿದ್ದಂತೆ ಆಶಾ ಕಾರ್ಯಕರ್ತೆಯರು ತಮ್ಮ ಆಕ್ರೋಶ ಹೊರಹಾಕಿದರು. ಹಿಂದಿನ ಅಹೋರಾತ್ರಿ ಧರಣಿಯ ಸಂದರ್ಭದಲ್ಲಿ ಆಗಮಿಸಿದ್ದ ಅವರು, ‘ಸಿಎಂ ಮಾತೃಹೃದಯಿಗಳು, ನಿಮಗೆ 10 ಸಾವಿರ ರೂ.ಗೌರವಧನ ನಿಗದಿಪಡಿಸಿದ್ದಾರೆ’ ಎಂದು ತಿಳಿಸಿ ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು. ಆದರೆ, ಸುಮಾರು ಎರಡು ವರ್ಷಗಳು ಸಮೀಪಿಸುತ್ತಿದ್ದರೂ ಯಾವುದೇ ಬೇಡಿಕೆ ಈಡೇರಿಲ್ಲ ಎಂದು ಕಾರ್ಯಕರ್ತೆಯರು ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನಾಗಲಕ್ಷ್ಮಿ ಚೌಧರಿ, ‘ನಾನು ಸರಕಾರವಲ್ಲ, ಮಹಿಳಾ ಆಯೋಗದ ಅಧ್ಯಕ್ಷೆ. ಮಹಿಳೆಯರ ಪರ ಧ್ವನಿ ಎತ್ತುವುದು ನನ್ನ ಕೆಲಸ. ಈ ಬಾರಿಯೂ ನಿಮ್ಮ ಪರವಾಗಿ ಧ್ವನಿ ಎತ್ತುತ್ತೇನೆ. ನಿಮ್ಮ ಬೇಡಿಕೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ನನ್ನ ಮೇಲೆ ವಿಶ್ವಾಸವಿಡಿ’ ಎಂದು ಹೇಳಿದರು.
ಆದರೆ, ಸರಕಾರ ನಮ್ಮ ಎಲ್ಲ ವಿಶ್ವಾಸವನ್ನೂ ಕಳೆದುಕೊಂಡಿದೆ. ಕಳೆದ ಬಾರಿ ನಿಮ್ಮ ಮತ್ತು ಸರಕಾರದ ಮೇಲೆ ವಿಶ್ವಾಸವಿಟ್ಟು ಪ್ರತಿಭಟನೆ ಹಿಂತೆಗೆದುಕೊಂಡಿದ್ದೆವು. ಈ ಬಾರಿ ಮತ್ತೆ ಮೋಸ ಹೋಗುವುದಿಲ್ಲ. ಬೇಡಿಕೆಗಳು ಈಡೇರಿ ಸರಕಾರದಿಂದ ಲಿಖಿತ ಭರವಸೆ ಸಿಗುವವರೆಗೂ ಹೋರಾಟ ಅಂತ್ಯಗೊಳಿಸುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಘೋಷಣೆ ಕೂಗಿದರು.
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್, ಕಾರ್ಯದರ್ಶಿ ಡಿ.ನಾಗಲಕ್ಷ್ಮಿ, ಪತ್ರಕರ್ತ ಇಂದೂಧರ ಹೊನ್ನಾಪುರ, ಕಾರ್ಮಿಕ ಮುಖಂಡ ಕೆ.ವಿ.ಭಟ್, ಕರ್ನಾಟಕ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ಶೈಲಜಾ ಸೇರಿದಂತೆ ಹಲವರು ಭಾಗವಹಿಸಿದ್ದರು.






