ಶವ ಸಂಸ್ಕಾರಕ್ಕೆ ತೆರಳಿದ್ದವರ ಮೇಲೆ ಹೆಜ್ಜೇನು ದಾಳಿ: ಓರ್ವ ಮೃತ್ಯು, 14 ಮಂದಿ ಆಸ್ಪತ್ರೆಗೆ ದಾಖಲು

ಚೆನ್ನಪ್ಪ- ಮೃತಪಟ್ಟವರು
ಚಾಮರಾಜನಗರ: ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ರವಿವಾರ ಸಂಜೆ ವರದಿಯಾಗಿದೆ.
ಗ್ರಾಮದ ಚೆನ್ನಪ್ಪ (60) ಮೃತಪಟ್ಟವರು. 14 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ರವಿವಾರ ಸಂಜೆ ಕುಟುಂಬಸ್ಥರು ಸ್ಮಶಾನದಲ್ಲಿ ಅಂತಿಮ ವಿಧಿವಿಧಾನ ನಡೆಸಿ ಚಿತೆಗೆ ಬೆಂಕಿ ಹಚ್ಚುತ್ತಿದ್ದಂತೆ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ಗುಂಪು ದಾಳಿ ಮಾಡಿವೆ. ಚೆನ್ನಪ್ಪ ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಉಳಿದ ಹಲವರು ಹೋಲಿ ಕ್ರಾಸ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಒಬ್ಬರು ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Next Story