ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ

ಸಮರ್ಥ್/ಉಮೇಶ್ ಮೇಟಿ
ಬೆಂಗಳೂರು : ಎರಡೂ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷವು, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್ಗೆ, ಬಾಗಲಕೋಟೆ ಕ್ಷೇತ್ರದಲ್ಲಿ ಎಚ್.ವೈ.ಮೇಟಿ ಕಿರಿಯ ಪುತ್ರ ಉಮೇಶ್ ಮೇಟಿ ಅವರಿಗೆ ಟಿಕೆಟ್ ಘೋಷಿಸಿದೆ.
ನಾಳೆ(ಮಾ.23) ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆ ಹಿನ್ನೆಲೆಯಲ್ಲಿ ಟಿಕೆಟ್ ಹಂಚಿಕೆ ಗೊಂದಲಕ್ಕೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ತೆರೆ ಎಳೆದಿದೆ. ರವಿವಾರ ಮಧ್ಯಾಹ್ನ ಎರಡು ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿಗಳ ಹೆಸರುಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಕುಟುಂಬದ ಸದಸ್ಯರಿಗೆ ಟಿಕೆಟ್:
ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆಯಲ್ಲಿ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಕುಟುಂಬದ ಸದಸ್ಯ ಸಮರ್ಥ್ ಮಲ್ಲಿಕಾರ್ಜುನ್ಗೆ ಟಿಕೆಟ್ ನೀಡಿದ್ದರೆ, ಅತ್ತ ಎಚ್.ವೈ.ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ಕ್ಷೇತ್ರದಲ್ಲಿ ಕಿರಿಯ ಪುತ್ರ ಉಮೇಶ್ ಮೇಟಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯವು ಟಿಕೆಟ್ಗಾಗಿ ಪಟ್ಟು ಹಿಡಿದಿತ್ತು. ಆದರೆ, ಹೈಕಮಾಂಡ್ ಮಾತುಕಥೆ ಬಳಿಕ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ತಮ್ಮ ಪುತ್ರ ಸಮರ್ಥ್ಗೆ ಟಿಕೆಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಆ ಮೂಲಕ ದಾವಣಗೆರೆ ಜಿಲ್ಲೆಯ ರಾಜಕೀಯದಲ್ಲಿ ಶಾಮನೂರು ಕುಟುಂಬವು ಮೇಲುಗೈ ಸಾಧಿಸಿದೆ.
ನಾಳೆ ನಾಮಪತ್ರ ಸಲ್ಲಿಕೆ: ಎರಡೂ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳನ್ನು ಪ್ರಕಟಿಸಿದ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್, ಇಬ್ಬರೂ ಅಭ್ಯರ್ಥಿಗಳಿಗೆ ‘ಬಿ ಫಾರಂ’ ವಿತರಣೆ ಮಾಡಿದ್ದಾರೆ. ನಾಳೆ(ಮಾ.23) ಎರಡೂ ಕ್ಷೇತ್ರಗಳಲ್ಲಿಯೂ ದೊಡ್ಡ ಸಂಖ್ಯೆಯ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿನ ನಾಮಪತ್ರ ಸಲ್ಲಿಕೆಯ ರ್ಯಾಲಿಯಲ್ಲಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಸೇರಿದಂತೆ ಇನ್ನಿತರ ಸಚಿವರು, ಎರಡೂ ಜಿಲ್ಲೆಗಳ ಶಾಸಕರು ಪಾಲ್ಗೊಳ್ಳಲಿದ್ದು, ಆ ಮೂಲಕ ಶಕ್ತಿ ಪ್ರದರ್ಶನ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಎ.9ಕ್ಕೆ ಉಪಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ(ಮಾ.23) ಕೊನೆಯ ದಿನವಾಗಿದ್ದು, ಮಾ.24ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ. ಉಮೇದುವಾರಿಗೆ ಹಿಂಪಡೆಯಲು ಮಾ.26 ಕೊನೆಯ ದಿನವಾಗಿದೆ. ಎಪ್ರಿಲ್ 9ಕ್ಕೆ ಎರಡೂ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮೇ 4ಕ್ಕೆ ಮತ ಎಣಿಕೆ ನಡೆಯಲಿದೆ.






