ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನತೆ | ಸುಳ್ಳು ಸುದ್ದಿಗಳು ಹರಡುವವರ ವಿರುದ್ಧ ಕಾನೂನು ಕ್ರಮ : ಬಿ.ದಯಾನಂದ್

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್
ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಆತಂಕಕ್ಕೊಳಗಾಗದಂತೆ ತಿಳುವಳಿಕೆ ನೀಡುವಂತೆ ಹಾಗೂ ಸುಳ್ಳು ಸುದ್ದಿಗಳು ಹರಡದಂತೆ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಶುಕ್ರವಾರ ನಗರದ ಆಡುಗೋಡಿಯ ಸಿಎಆರ್ ಮೈದಾನದಲ್ಲಿನ ನಡೆದ ಮಾಸಿಕ ಕವಾಯತಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರಿಗೆ ವಾಸ್ತವತೆ ಕುರಿತು ಸೂಕ್ತ ಮಾಹಿತಿ ನೀಡಬೇಕು, ಆದ್ದರಿಂದ ಮೊದಲು ನಾವು ಸೂಕ್ತ ಮಾಹಿತಿ ಪಡೆದುಕೊಂಡು ನಂತರ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಲು ಸೂಚಿಸಲಾಗಿದೆ ಎಂದರು.
ಸಾರ್ವಜನಿಕರು ಆವೇಶಕ್ಕೊಳಗಾಗದಂತೆ ನೋಡಿಕೊಳ್ಳಬೇಕಿರುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡದಂತೆ ಗಮನ ಹರಿಸಲು ನಗರದ ಎಲ್ಲ ಡಿಸಿಪಿ, ಎಸಿಪಿಗಳಿಗೆ ಸೂಚಿಸಲಾಗಿದೆ. ಸುಳ್ಳು ಸುದ್ದಿ ಹರಡಿದರೆ, ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿ.ದಯಾನಂದ್ ತಿಳಿಸಿದರು.
ಕೇಂದ್ರ ಹಾಗೂ ರಾಜ್ಯ ಸರಕಾರಗಳು ನೀಡುವ ಸೂಚನೆಗಳನ್ನು ಸಾರ್ವಜನಿಕರು ಪಾಲಿಸಬೇಕು. ಅಣಕು ಕವಾಯತಿನ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಯುದ್ಧ ಸಂದರ್ಭಗಳಲ್ಲಿ ಅಗತ್ಯವಿರುವ ಸಾಮಗ್ರಿಗಳನ್ನು ಶೇಖರಿಸಲಾಗುತ್ತಿದೆ ಎನ್ನುವ ಮಾಹಿತಿ ಕೇಳಿ ಬರುತ್ತಿದೆ. ಆದ್ದರಿಂದ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಬಿ.ದಯಾನಂದ್ ಹೇಳಿದರು.