ರಾಹುಲ್, ಪ್ರಿಯಾಂಕಾ ಗಾಂಧಿ ವಿರುದ್ಧ ದೂರು ನೀಡಿದ ಬಿಜೆಪಿ ಕಾರ್ಯಕರ್ತನಿಗೆ ‘ವೈ ಪ್ಲಸ್’ ಭದ್ರತೆ

ಎಸ್.ವಿಘ್ನೇಶ್ ಶಿಶಿರ್
ಹೊಸದಿಲ್ಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಿರುದ್ಧ ದೇಶದ ಹಲವು ಪೊಲೀಸ್ ಠಾಣೆಗಳಲ್ಲಿ ದೂರು ಸಲ್ಲಿಸಿ, ನ್ಯಾಯಾಲಯಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗಳನ್ನು ಹೂಡಿರುವ ಕರ್ನಾಟಕದ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಅವರಿಗೆ ‘ವೈ ಪ್ಲಸ್’ ಭದ್ರತೆ ಒದಗಿಸುವಂತೆ ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠವು ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚನೆ ನೀಡಿದೆ.
ಬಿಜೆಪಿ ರಾಜ್ಯ ಘಟಕದ ಸದಸ್ಯರಾಗಿರುವ ವಿಘ್ನೇಶ್ ಅವರು, “ರಾಹುಲ್ ಗಾಂಧಿ ಅವರು ಬ್ರಿಟನ್ ಪಾಸ್ಪೋರ್ಟ್ ಹೊಂದಿದ್ದಾರೆ. ಅವರ ಲೋಕಸಭೆ ಸದಸ್ಯತ್ವವನ್ನು ರದ್ದುಪಡಿಸಬೇಕು ಮತ್ತು ಪೌರತ್ವದ ಬಗ್ಗೆ ಸುಳ್ಳು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿ ಅಲಹಾಬಾದ್ ಹೈಕೋರ್ಟ್ ನ ಲಕ್ನೋ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.
ಆದರೆ, ಪೀಠವು ಮೇ 5ರಂದು ಆ ಅರ್ಜಿಯನ್ನು ವಜಾಗೊಳಿಸಿತ್ತು. “ಸಾಕ್ಷ್ಯಗಳು ದೊರೆತರೆ ಮರುಪರಿಶೀಲನಾ ಅರ್ಜಿ ಸಲ್ಲಿಸಬಹುದು” ಎಂದು ಹೇಳಿದ ನಂತರ, ವಿಘ್ನೇಶ್ ಅವರು ಮೇ 15ರಂದು ಮರುಪರಿಶೀಲನಾ ಅರ್ಜಿ ಸಲ್ಲಿಸಿ, ಬಳಿಕ ರಾಯಬರೇಲಿ ಎಸ್ಪಿ ಗೆ ದೂರು ನೀಡಿದ್ದರು.
ನಂತರ ಲಕ್ನೋ ಪೀಠಕ್ಕೆ ಸಲ್ಲಿಸಿದ ರಿಟ್ ಅರ್ಜಿಯಲ್ಲಿ, ವಿಘ್ನೇಶ್ “ರಾಹುಲ್ ಮತ್ತು ಪ್ರಿಯಾಂಕಾ ವಿರುದ್ಧ ದೂರು ಹಾಗೂ ಅರ್ಜಿಗಳನ್ನು ಸಲ್ಲಿಸಿದ ನಂತರ ಪ್ರತಿದಿನ ಜೀವ ಬೆದರಿಕೆಗಳು ಬರುತ್ತಿವೆ. ಹೀಗಾಗಿ ನನಗೆ ‘ವೈ ಪ್ಲಸ್’ ಭದ್ರತೆ ಒದಗಿಸಬೇಕು” ಎಂದು ಮನವಿ ಮಾಡಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಬಳಿಕ, ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠವು ಕೇಂದ್ರ ಗೃಹ ಸಚಿವಾಲಯಕ್ಕೆ ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.







