Bengaluru | ಕೇಂದ್ರ ಸರಕಾರದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಎತ್ತಿನ ಗಾಡಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಕೇಂದ್ರ ಸರಕಾರ ದಿನನಿತ್ಯ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಎತ್ತಿನ ಗಾಡಿಯಲ್ಲಿ ದ್ವಿಚಕ್ರ ವಾಹನವನ್ನಿಟ್ಟು ಅದನ್ನು ಏಳೆಯುವ ಮೂಲಕ ಆಕ್ರೋಶ ಹೊರಹಾಕಿದರು.
ಸೋಮವಾರ ಇಲ್ಲಿನ ಫ್ರೀಡಂ ಪಾರ್ಕಿನ ಮೈದಾನದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಮಾಧ್ಯಮ ವಿಭಾಗ ನೇತೃತ್ವದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸತತ ನಾಲ್ಕು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ನಡೆ ಖಂಡಿಸಿ ಘೋಷಣೆ ಮೊಳಗಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಯುವ ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷ ದೀಪಕ್ ಗೌಡ, ಸತತ 15 ದಿನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ನಾಲ್ಕು ಬಾರಿ ಏರಿಕೆ ಮಾಡಿದ್ದಾರೆ ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೆಚ್ಚಳವಾಗಿದೆ.ಬಡವರು, ಮಧ್ಯಮ ವರ್ಗದವರು ಜೀವನ ಸಾಗಿಸುವುದು ಸಂಕಷ್ಟವಾಗಿದೆ. ಆದರೆ, ಈ ಬಗ್ಗೆ ರಾಜ್ಯದಲ್ಲಿ ಬಿಜೆಪಿ ಲೋಕಸಭಾ ಸದಸ್ಯರುಗಳು ಮೌನವಾಗಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾನೂನು ವಿಭಾಗದ ಅಧ್ಯಕ್ಷ ಶ್ರೀಧರ್ ರಾವ್, ಉತ್ತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಹುಲ್ ಗೌಡ, ಗಾಂಧಿನಗರ ವಿಧಾನಸಭಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಸೇರಿದಂತೆ ಪ್ರಮುಖರಿದ್ದರು.






