Bengaluru | 23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ: ಆರೋಪಿಯ ಬಂಧನ

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು : ಬೆಂಗಳೂರು ನಗರದಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ಓರ್ವ ವಿದೇಶಿ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ದಾಳಿಯ ವೇಳೆ 11.50 ಕೆ.ಜಿ. ಎಂಡಿಎಂಎ ಕ್ರಿಸ್ಟಲ್ ಮತ್ತು 1040 ಎಕ್ಸೆಟಿಸ್ ಮಾತ್ರೆಗಳು ಪತ್ತೆಯಾಗಿದ್ದು, ನೈಜೀರಿಯಾ ಮೂಲದ ಎಜಿಕೆ ನೈಗೂ ಒಕಾಫಾರ್(42) ಎಂಬುವನನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
2017ರಲ್ಲಿ ವ್ಯವಹಾರದ ವಿಸಾದಡಿಯಲ್ಲಿ ಭಾರತಕ್ಕೆ ಬಂದಿದ್ದ ಈತ, ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಎಂಬುದು ತಿಳಿದು ಬಂದಿದೆ. ಆರೋಪಿಯು ಹೊಸದಿಲ್ಲಿಯಿಂದ ಡ್ರಗ್ಸ್ ತರಿಸಿಕೊಂಡು ಮನೆಯಲ್ಲಿ ಸಂಗ್ರಹಿಸಿದ್ದಾನೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.
ಈತ ಕರ್ನಾಟಕದ ಜೊತೆಗೆ ಚೆನ್ನೈ ಮತ್ತು ಹೈದರಾಬಾದ್ ಸೇರಿ ಹಲವು ನಗರಗಳಲ್ಲಿ ಇತರ ಪೆಡ್ಲರ್ಗಳ ಮೂಲಕ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಡ್ರಗ್ ಮಾರಾಟ ಮಾಡುತ್ತಿದ್ದ ಎಂದು ಸಿಸಿಬಿ ತನಿಖೆಯಲ್ಲಿ ಗೊತ್ತಾಗಿದೆ.
ಸದ್ಯ, ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದ್ದು, ಆತನ ಸಂಪರ್ಕದಲ್ಲಿ ಯಾರ್ಯಾರಿದ್ದಾರೆ, ಎಷ್ಟು ವರ್ಷಗಳಿಂದ ಈ ದಂಧೆ ನಡೆಯುತ್ತಿದೆ ಎಂಬ ಬಗ್ಗೆ ತನಿಖೆ ತೀವ್ರಗೊಳಿಸಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.





