ಬೆಂಗಳೂರು | ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಮೂವರು ಮೃತ್ಯು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ದೇವನಹಳ್ಳಿ ತಾಲೂಕಿನ ಸಾದಹಳ್ಳಿ ನಿವಾಸಿಗಳಾದ ಮೋಹನ್ ಕುಮಾರ್ (33), ಸುಮನ್ (28), ಸಾಗರ್ (23) ಎಂದು ಗುರುತಿಸಲಾಗಿದೆ.
ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರ ಕಡೆಯಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ KA 50 MA 0789 ಸಂಖ್ಯೆಯ ಕಾರು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕೆಎಸ್‌ಆರ್‌ಟಿಸಿ ಬಸ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಅಪಘಾತ ಸ್ಥಳದಿಂದ ಕಾರನ್ನು ಹೊರತೆಗೆಯುವ ಕಾರ್ಯ ಪೂರ್ಣಗೊಂಡಿದ್ದು, ಸಂಚಾರ ದಟ್ಟಣೆ ನಿಧಾನವಾಗಿ ಕಡಿಮೆಯಾಗುತ್ತಿದೆ.





