ಬೆಂಗಳೂರು: ಫೆಲೆಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ಪೊಲೀಸರು
ಸಿದ್ದರಾಮಯ್ಯ ಸರಕಾರದ ವಿರುದ್ಧ ಕಲಾವಿದರ ಆಕ್ರೋಶ

ಬೆಂಗಳೂರು: ಫೆಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿ ವಿರೋಧಿಸಿ ಬೆಂಗಳೂರಿನ ರಂಗಶಂಕರದಲ್ಲಿ ಆಯೋಜಿದ್ದ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ನ.29ರ ಸಂಜೆ 5:30ಕ್ಕೆ ಕಾವ್ಯಗೋಷ್ಠಿ, ಕಿರು ನಾಟಕ ಸೇರಿದಂತೆ ಫೆಲೆಸ್ತೀನ್‌ನಲ್ಲಿ ಇಸ್ರೇಲ್ ನಡೆಯುತ್ತಿರುವ ಹತ್ಯಾಕಾಂಡವನ್ನು ಖಂಡಿಸಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಲಾವಿದರಾದ ಎಂ.ಡಿ ಪಲ್ಲವಿ, ಶ್ವೇತಾಂಶು ಬೋರ, ರಮಣೀಕ್ ಸಿಂಗ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಆದರೆ ಇಂದು ನಡೆಯಬೇಕಿದ್ದ ಕಾರ್ಯಕ್ರಮ ರದ್ದಾಗಿರುವ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟರ್ ಹಂಚಿಕೊಂಡಿರುವ ಗಾಯಕಿ ಎಂ.ಡಿ ಪಲ್ಲವಿ, “ಕಾರ್ಯಕ್ರಮ ರದ್ದಾಗಿದೆ. ಪೊಲೀಸರು ಅನುಮತಿ ನಿರಾಕರಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಮಣೀಕ್ ಸಿಂಗ್, “ಪಲ್ಲವಿ ಎಂ.ಡಿ ಮತ್ತು ಶ್ವೇತಾಂಶು ಬೋರಾ ಜೊತೆ ಸೇರಿ ನಾವು ಕವಿತೆಗಳನ್ನು ಓದಲು ನಿರ್ಧರಿಸಿದ್ದೆವು. ಈ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ರಂಗಶಂಕರದಂತಹ ಸಂಸ್ಥೆಯನ್ನು ಬೆದರಿಸುವ ಮೂಲಕ ಕರ್ನಾಟಕ ರಾಜ್ಯ ಸರ್ಕಾರವು ಪ್ರಜಾಪ್ರಭುತ್ವದ ಮೇಲಿನ ತನ್ನ ಬದ್ಧತೆ ಕೊರತೆಯನ್ನು ಪ್ರದರ್ಶಿಸಿದೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.
ಸರ್ಕಾರದ ಈ ಕ್ರಮದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಜನರು ಆಕ್ರೋಶ ಹೊರಹಾಕಿದ್ದಾರೆ.







