ರಾಜ್ಯ ರಾಜಕಾರಣಕ್ಕೆ ಸಿದ್ದರಾಮಯ್ಯನವರು ಅನಿವಾರ್ಯ : ಭೈರತಿ ಸುರೇಶ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ವಿರೋಧವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣಕ್ಕೆ ಸಿದ್ದರಾಮಯ್ಯನವರು ಅನಿವಾರ್ಯ. ಮುಂದಿನ ಬಾರಿ ಅವರ ಸ್ಪರ್ಧೆಗೆ ಎಐಸಿಸಿ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಪಕ್ಷದ ಯಾರಿಂದಲೂ ವಿರೋಧವಿಲ್ಲ ಎಂದರು.
ಸಿದ್ದರಾಮಯ್ಯ ಅವರು ಮುಂದಿನ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ನಂಬಿಕೆ ನಮ್ಮದಾಗಿದೆ. ನಮ್ಮ ಪಕ್ಷದ ಶಾಸಕರಾಗಲೀ, ಮಂತ್ರಿಗಳಾಗಲೀ ಅಥವಾ ನಾಯಕರಾಗಲೀ ಯಾರೂ ಪಕ್ಷದ ವಿರುದ್ಧ, ನಾಯಕತ್ವದ ವಿರುದ್ಧ ಹೇಳಿಕೆಗಳನ್ನು ನೀಡಿಲ್ಲ. ಅವರೆಲ್ಲರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪರವಾಗಿಯೇ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಭೈರತಿ ಸುರೇಶ್ ತಿಳಿಸಿದರು.
ನಮ್ಮ ಸರಕಾರ ಜನತೆಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಜನರು ಖುಷಿಯಾಗಿದ್ದಾರೆ. ನಮ್ಮದೇನಿದ್ದರೂ ಅಭಿವೃದ್ಧಿ ವಿಚಾರದಲ್ಲಿ ಕೆಲಸ ಮಾಡುವ ಸರಕಾರವಾಗಿದೆ. ಹೈಕಮಾಂಡ್ ತನ್ನದೇ ಆದ ರೀತಿಯಲ್ಲಿ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡುತ್ತದೆ. ಶತಮಾನದ ಇತಿಹಾಸವಿರುವ ಕಾಂಗ್ರೆಸ್ ಹೈಕಮಾಂಡ್ ಸದೃಢವಾಗಿದೆ ಎಂದು ಭೈರತಿ ಸುರೇಶ್ ಹೇಳಿದರು.
ನವೆಂಬರ್ ಕ್ರಾಂತಿ ಇರುವುದು ಬಿಜೆಪಿಯಲ್ಲಿ ಮಾತ್ರ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ನವೆಂಬರ್ ಕ್ರಾಂತಿ ಇರುವುದು ಬಿಜೆಪಿಯಲ್ಲಿ ಮಾತ್ರ. ಆ ಪಕ್ಷದ ರೀತಿಯಲ್ಲಿ ನಮ್ಮ ಕಾಂಗ್ರೆಸ್‍ನಲ್ಲಿ ಯಾವುದೇ ಕಿತ್ತಾಟವಿಲ್ಲ. ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಬಿ.ವೈ.ವಿಜಯೇಂದ್ರ ಅವರ ನಡುವೆಯೇ ಕಿತ್ತಾಟ ನಡೆಯುತ್ತಿದೆ ಎಂದು ಭೈರತಿ ಸುರೇಶ್ ತಿಳಿಸಿದರು.







