ಕನ್ನಡ ಬಿಗ್ ಬಾಸ್ ಸ್ಟುಡಿಯೊದಲ್ಲಿ ಪರಿಸರ ಮಾನದಂಡಗಳ ಪಾಲನೆ: 7 ದಿನಗಳಲ್ಲಿ ತಪಾಸಣೆ ನಡೆಸುವಂತೆ NGT ಗಡುವು

PC : Bigg Boss Kannada season 12
ಬೆಂಗಳೂರು: ಕನ್ನಡ ಬಿಗ್ ಬಾಸ್ ಶೋ ಆತಿಥ್ಯ ವಹಿಸಿರುವ ವೆಲ್ಸ್ ಸ್ಟುಡಿಯೋಸ್ ಆ್ಯಂಡ್ ಎಂಟರ್ ಟೈನ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಅನ್ನು ಇನ್ನು ಏಳು ದಿನಗಳೊಳಗಾಗಿ ತಪಾಸಣೆ ನಡೆಸಿ, ಸೂಕ್ತ ಆದೇಶ ಹೊರಡಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಗಡುವು ವಿಧಿಸಿದೆ.
ವೆಲ್ಸ್ ಸ್ಟುಡಿಯೋಸ್ ಆ್ಯಂಡ್ ಎಂಟರ್ ಟೈನ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಅನ್ನು ಮುಚ್ಚಬೇಕು ಎಂಬ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಪುಷ್ಪಾ ಸತ್ಯನಾರಾಯಣ ಮತ್ತು ತಜ್ಞ ಸದಸ್ಯ ಪ್ರಶಾಂತ್ ಗಾರ್ಗವರನ್ನೊಳಗೊಂಡ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ದಕ್ಷಿಣ ವಲಯ ನ್ಯಾಯಪೀಠ ಈ ಸೂಚನೆ ನೀಡಿದೆ.
ವೆಲ್ಸ್ ಸ್ಟುಡಿಯೋಸ್ ಆ್ಯಂಡ್ ಎಂಟರ್ ಟೈನ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಪೂರ್ವಾನುಮತಿಯಿಲ್ಲದೆ ಹಾಗೂ ತನ್ನ ಆವರಣದಲ್ಲಿ ಉತ್ಪತ್ತಿಯಾಗುತ್ತಿರುವ ತ್ಯಾಜ್ಯ ನೀರನ್ನು ಸಮರ್ಪಕವಾಗಿ ಸಂಸ್ಕರಿಸದೆ ಹೊರಗೆ ಬಿಡುತ್ತಿದೆ ಎಂದು ಆರೋಪಿಸಿ, ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಸ್ಟುಡಿಯೊದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿತ್ತು.
ನೀರು (ಮಾಲಿನ್ಯ ತಡೆ ಮತ್ತು ನಿಯಂತ್ರಣ) ಕಾಯ್ದೆ, 1974ರ ಅಡಿ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಅಕ್ಟೋಬರ್ 6, 2025ರಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಎತ್ತಿ ತೋರಿಸಿದ್ದ ಎಲ್ಲ ನ್ಯೂನತೆಗಳನ್ನು ಸರಿಪಡಿಸಲಾಗಿದೆ ಎಂದು ವೆಲ್ಸ್ ಸ್ಟುಡಿಯೋಸ್ ಆ್ಯಂಡ್ ಎಂಟರ್ ಟೈನ್ ಮೆಂಟ್ ಪ್ರೈವೇಟ್ ಲಿಮಿಟೆಡ್ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.
ಮಾಲಿನ್ಯ ನಿಯಂತ್ರಣ ಕಾಯ್ದೆಯ ನಿಯಮಗಳನ್ನು ಪಾಲನೆ ಮಾಡಲಾಗಿದೆ ಹಾಗೂ ತನ್ನ ಆದೇಶವನ್ನು ಮರುಪರಿಶೀಲಿಸಲು ಸ್ಥಳದ ತಪಾಸಣೆ ನಡೆಸುವಂತೆ ಅಕ್ಟೋಬರ್ 29ರಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಪತ್ರದ ಮೂಲಕ ಮಾಹಿತಿ ನೀಡಲಾಗಿದೆ ಎಂದು ಕಂಪೆನಿಯ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು.
ಅರ್ಜಿದಾರರ ಪರ ವಾದವನ್ನು ಆಲಿಸಿದ ನ್ಯಾಯಮಂಡಳಿ, ಕಂಪೆನಿಯ ಪತ್ರದ ಪ್ರಕಾರ, ಮಾಲಿನ್ಯ ನಿಯಂತ್ರಣ ಕಾಯ್ದೆಯ ನಿಯಮಗಳನ್ನು ಪಾಲಿಸಲಾಗಿದೆಯೆ ಎಂಬುದನ್ನು ಪರಿಶೀಲಿಸಲು ಸ್ಥಳದ ತಪಾಸಣೆ ನಡೆಸಬೇಕು ಹಾಗೂ ನವೆಂಬರ್ 21ರಿಂದ ಏಳು ದಿನಗಳೊಳಗಾಗಿ ಆದಷ್ಟೂ ಶೀಘ್ರವಾಗಿ ಸೂಕ್ತ ಆದೇಶವನ್ನು ಹೊರಡಿಸಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ನಿರ್ದೇಶನ ನೀಡಿದೆ.







