ಬಿಕ್ಲು ಶಿವ ಕೊಲೆ ಪ್ರಕರಣ; ಜಾಮೀನು ರದ್ದು ಕೋರಿದ ಅರ್ಜಿ ಸಂಬಂಧ ಬೈರತಿ ಬಸವರಾಜ್‌ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದು ಕೋರಿರುವ ಅರ್ಜಿ ಸಂಬಂಧ ಐದನೇ ಆರೋಪಿ ಬೈರತಿ ಬಸವರಾಜ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕೆ.ಆರ್.ಪುರ ಶಾಸಕ ಬೈರತಿ ಬಸವರಾಜ್‌ಗೆ ಜಾಮೀನು ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 2026ರ ಮಾರ್ಚ್ 12ರಂದು ಹೊರಡಿಸಿರುವ ಆದೇಶ ರದ್ದು ಕೋರಿ ಸಿಐಡಿ ತನಿಖಾಧಿಕಾರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ರಾಜ್ಯ ಹೆಚ್ಚುವರಿ ಸರಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿ ಬೈರತಿ ಬಸವರಾಜ್‌ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿತು.
ಪ್ರಕರಣ ಸಂಬಂಧ ಅರ್ಜಿದಾರರನ್ನು ಈಗಾಗಲೇ ಪೊಲೀಸ್ ವಶದಲ್ಲಿಟ್ಟುಕೊಂಡು ನಡೆಸಿರುವ ವಿಚಾರಣೆ ಪೂರ್ಣಗೊಂಡಿದ್ದು, ಮತ್ತೆ ಪೊಲೀಸ್ ವಶದಲ್ಲಿಟ್ಟುಕೊಂಡು ವಿಚಾರಣೆ ನಡೆಸಬೇಕಾದ ಅಗತ್ಯವಿಲ್ಲ ಎಂಬ ಅಂಶ ಸಿಐಡಿ ತನಿಖಾಧಿಕಾರಿಗಳು ಸಲ್ಲಿಸಿರುವ ರಿಮ್ಯಾಂಡ್ ಅರ್ಜಿಯಿಂದ ತಿಳಿಯಲಿದೆ. ಆದ್ದರಿಂದ, ಅರ್ಜಿದಾರರಿಗೆ ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಬಹುದಾಗಿದೆ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾರ್ಚ್ 12ರಂದು ಹೊರಡಿಸಿದ್ದ ಆದೇಶದಲ್ಲಿ ತಿಳಿಸಿತ್ತು.






