ಬಿಜೆಪಿಯಿಂದ ರಾಜ್ಯಸಭೆ, ವಿಧಾನ ಪರಿಷತ್ ಅಭ್ಯರ್ಥಿಗಳ ಘೋಷಣೆ

ಪ್ರೊ.ಎಂ.ನಾಗರಾಜ್, ರಘು ಕೌಟಿಲ್ಯ, ಲಿಂಗರಾಜ್ ಪಾಟೀಲ್
ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ರಾಜ್ಯಸಭೆಗೆ ಪ್ರೊ.ಎಂ.ನಾಗರಾಜ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ವಿಧಾನ ಪರಿಷತ್ ಚುನಾವಣೆಗೆ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಈ ಬಾರಿ ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಟಿಕೆಟ್ ನೀಡಿಲ್ಲ.
ಮೈಸೂರಿನ ರಘು ಕೌಟಿಲ್ಯ ಪ್ರಸ್ತುತ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಗೋವಿಂದ ರಾಜು ವಿಧಾನ ಪರಿಷತ್ ಚುನಾವಣಾ ಕಣಕ್ಕಿಳಿಯಲಿದ್ದಾರೆ.
ರಾಜ್ಯಸಭೆ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟಿರುವ ಎಂ.ನಾಗರಾಜ್ ಅವರು ಕರ್ನಾಟಕ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜೊತೆಗೆ ಕರ್ನಾಟಕ ಲೋಕಸೇವಾ ಆಯೋಗ ಸದಸ್ಯರಾಗಿಯೂ ಸೇವೆ ಸಲ್ಲಿಸಿರುವ ಅನುಭವ ಹೊಂದಿದ್ದಾರೆ.
ಜನಸಂಘದ ಸ್ಥಾಪಕ ದೀನದಯಾಳ್ ಉಪಾಧ್ಯಾಯ ಅವರ ಜನ್ಮಶತಮಾನೋತ್ಸವದ ಅಂಗವಾಗಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಬಿಜೆಪಿ ಸ್ವಂತ ಕಾರ್ಯಾಲಯ ನಿರ್ಮಿಸುವ ಯೋಜನೆಯಲ್ಲಿ, ಅಮಿತ್ ಶಾ ಅವರ ಕನಸಿನ ಯೋಜನೆಯಾದ ಭವನ ನಿರ್ಮಾಣ ಸಮಿತಿಯ ಕರ್ನಾಟಕ ಸಂಚಾಲಕರಾಗಿ ಎಂ. ನಾಗರಾಜ್ ಕಾರ್ಯನಿರ್ವಹಿಸಿದ್ದರು.






