ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಮಾ.2ರ ವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು : ಗುತ್ತಿಗೆದಾರನಿಂದ ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೆತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಗೆ 9 ದಿನ ನ್ಯಾಯಾಂಗ ಬಂಧನಕ್ಕೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಾಸಕ ಡಾ.ಚಂದ್ರು ಲಮಾಣಿ ಮಾಲಕತ್ವದ ಲಕ್ಷ್ಮೀಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದರು. ಗುತ್ತಿಗೆದಾರರಿಂದ 5ಲಕ್ಷ ರೂ.ಲಂಚ ಪಡೆಯುತ್ತಿದ್ದ ವೇಳೆ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಆಪ್ತಸಹಾಯಕರಿಬ್ಬರಾದ ಮಂಜುನಾಥ್ ಹಾಗೂ ಗುರುನಾಯಕ್‍ರನ್ನು ಪೊಲೀಸರು ಬಂಧಿಸಿದ್ದರು.
ಇದೀಗ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಮಾ.2ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ನಾಯಾಯಾಲಯ ಆದೇಶ ಹೊರಡಿಸಿದೆ.
ಪರಪ್ಪನ ಅಗ್ರಹಾರಕ್ಕೆ ಶಿಫ್ಟ್: ರವಿವಾರ ಬೆಳಗ್ಗೆ ಡಾ.ಚಂದ್ರು ಲಮಾಣಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‍ನ ನ್ಯಾಯಾಧೀಶರಾದ ಗಜಾನನ ಭಟ್‍ರ ಮುಂದೆ ಹಾಜರುಪಡಿಸಲಾಯಿತು. ಶಾಸಕರು ಹಾಗೂ ಅವರ ಆಪ್ತರಿಬ್ಬರಿಗೆ 9 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಲು ಆದೇಶಿಸಿದ್ದಾರೆ. ನ್ಯಾಯಾಂಗ ಬಂಧನ ಹಿನ್ನೆಲೆ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಯಿತು.
ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರ ಬಂಧನ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಲೋಕಾಯುಕ್ತ ದಾಳಿಯ ಸುದ್ದಿ ತಿಳಿಯುತ್ತಿದ್ದಂತೆ ಗದಗದ ಲಕ್ಷ್ಮೀಶ್ವರ ಪಟ್ಟಣದಲ್ಲಿನ ಡಾ.ಚಂದ್ರು ಒಡೆತನದ ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ ನೂರಾರು ಬಿಜೆಪಿ ಕಾರ್ಯಕರ್ತರು, ರಾಜ್ಯ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೋಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.






