ವಸತಿ ಇಲಾಖೆಯಲ್ಲಿ ನಡೆದಿರುವ ವಿಚಾರವನ್ನು ಸಿಎಂ ಗಮನಕ್ಕೆ ತಂದಿದ್ದೇನೆ : ಬಿ.ಆರ್.ಪಾಟೀಲ್

ಬೆಂಗಳೂರು : ‘ಸಮಾಧಾನ, ಅಸಮಾಧಾನದ ಪ್ರಶ್ನೆಯೇ ಇಲ್ಲ. ವಸತಿ ಇಲಾಖೆಯಲ್ಲಿ ಮನೆ ಮಂಜೂರಾತಿ ವಿಚಾರದಲ್ಲಿ ನಡೆದಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ. ಅವರೇನು ಕ್ರಮ ಕೈಗೊಳ್ಳುತ್ತಾರೋ ನೋಡೋಣ’ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಆಳಂದ ಕ್ಷೇತ್ರದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ತಿಳಿಸಿದ್ದಾರೆ.
ಗುರುವಾರ ಇಲ್ಲಿನ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಖುದ್ದು ಭೇಟಿ ಮಾಡಿ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿ.ಆರ್.ಪಾಟೀಲ್, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ವಸತಿ ಇಲಾಖೆಯಲ್ಲಿ ನಡೆದಿರುವ ವಿಚಾರವನ್ನು ವಿವರವಾಗಿ ತಿಳಿಸಿದ್ದೇನೆ’ ಎಂದರು.
ಉಭಯ ನಾಯಕರು ನನ್ನ ಎಲ್ಲ ವಿಚಾರಗಳನ್ನು ಸಮಾಧಾನದಿಂದ ಕೇಳಿದ್ದಾರೆ. ಅವರಿಬ್ಬರು ಏನು ಕ್ರಮ ಕೈಗೊಳ್ಳುತ್ತಾರೆಂಬುದು ಅವರಿಗೆ ಬಿಟ್ಟದ್ದು. ಇಬ್ಬರು ಕೂಡ ಯೋಚನೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗಲಿದೆ ಎಂದು ನನಗೆ ಭರವಸೆ ಇದೆ ಎಂದು ಬಿ.ಆರ್.ಪಾಟೀಲ್ ಹೇಳಿದರು.





