ಹೊರೆಯಾಗದಂತೆ ಬಸ್ ಪ್ರಯಾಣ ದರ ಏರಿಕೆ : ಸಚಿವ ಬೈರತಿ ಸುರೇಶ್

ಬೆಂಗಳೂರು : ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ದರಗಳು ಹೆಚ್ಚಾಗುತ್ತಿವೆ. ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಎಲ್ಲ ಸಾರಿಗೆ ನಿಗಮಗಳಿಗೆ ಸುಮಾರು 5ಸಾವಿರ ಕೋಟಿ ರೂಪಾಯಿಗಳಷ್ಟು ನಷ್ಟವಾಗುತ್ತಿದೆ. ಹೀಗಾಗಿ ಸಾರ್ವಜನಿಕ ಪ್ರಯಾಣಿಕರಿಗೆ ಹೊರೆಯಾಗದಂತೆ ಬಸ್ ಪ್ರಯಾಣ ದರ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ಇಂಧನ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಆದರೆ, ಸರಕಾರಕ್ಕೆ ಸಾರಿಗೆ ಇಲಾಖೆಯಿಂದ ಇದುವರೆಗೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಂದಿನ ಸಚಿವ ಸಂಪುಟ ಸಭೆಗಳಲ್ಲಿ ಈ ಬಗ್ಗೆ ಪ್ರಸ್ತಾವನೆ ಮಂಡಿಸಲಾಗುತ್ತದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸರಕಾರ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. ಆದಾಗ್ಯೂ, ಜನ ಸಾಮಾನ್ಯರಿಗೆ ಹೊರೆ ಆಗದ ರೀತಿಯಲ್ಲಿ ಪ್ರಯಾಣ ದರ ಹೆಚ್ಚಳ ಮಾಡುವ ಚರ್ಚೆಗಳು ನಡೆದಿವೆ ಎಂದು ಅವರು ತಿಳಿಸಿದರು.




