ಬರ ಪರಿಹಾರಕ್ಕೆ ಎಕರೆಗೆ 50 ಸಾವಿರ ರೂ. ನೀಡಿ : ಬಿ.ವೈ.ವಿಜಯೇಂದ್ರ ಆಗ್ರಹ
"ಗ್ಯಾರಂಟಿಗಳಿಂದ ಖಜಾನೆ ಖಾಲಿ; ಹಣಕಾಸು ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಿ"

ತುಮಕೂರು : ಪ್ರಧಾನಿ ನರೇಂದ್ರ ಮೋದಿ ಅವರು 25 ವರ್ಷಗಳ ಸಾರ್ವಜನಿಕ ಜೀವನದಲ್ಲಿ ದೇಶವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಸೇವಾ ಸಂಕಲ್ಪದ ಹಿನ್ನೆಲೆಯಲ್ಲಿ ಬಿಜೆಪಿ ದೇಶಾದ್ಯಂತ ಸೇವಾ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಂಡಿದ್ದು, ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹಾಗಲವಾಡಿ ಜುಂಜಪ್ಪನ ಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೇವಾ ಸಂಕಲ್ಪ ಹಾಗೂ ಬೂತ್ ಸಂಕಲ್ಪವನ್ನು ಒಟ್ಟಾಗಿ ನಡೆಸಲಾಗುತ್ತಿದೆ. ಕಾಡುಗೊಲ್ಲರ ಜುಂಜಪ್ಪನ ಹಟ್ಟಿಯಲ್ಲಿ ದೇವರ ಸೇವೆ ಮಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.
ಬರ ಪರಿಹಾರದಲ್ಲಿ ಸರಕಾರದ ನಿರ್ಲಕ್ಷ್ಯ :
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ನಂತರ ಚುನಾಯಿತ ಸರಕಾರವೊಂದು ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ ಎಂಬ ಭಾವನೆ ಜನರಿಗೆ ಮೂಡುತ್ತಿಲ್ಲ ಎಂದು ವಿಜಯೇಂದ್ರ ಟೀಕಿಸಿದರು.
ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇದ್ದರೂ ಕೇಂದ್ರ ಸರಕಾರದ ಅನುದಾನಕ್ಕಾಗಿ ಕಾಯುತ್ತಾ ಕುಳಿತಿರುವ ರಾಜ್ಯ ಸರಕಾರ, ಒಂದು ಹೆಕ್ಟೇರ್‌ಗೆ ಕೇವಲ 2,500 ಪರಿಹಾರ ಘೋಷಿಸಿರುವುದು ಅತ್ಯಂತ ಕಡಿಮೆ ಮೊತ್ತವಾಗಿದೆ ಎಂದು ಅವರು ಆಕ್ಷೇಪಿಸಿದರು.
“ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಎಕರೆಗೆ 50 ಸಾವಿರ ಪರಿಹಾರ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ರೈತರ ಸಂಕಷ್ಟಕ್ಕೆ ಸೂಕ್ತ ಸ್ಪಂದನೆ ನೀಡುವ ಬದಲು ಸರಕಾರ ಅತ್ಯಲ್ಪ ಪರಿಹಾರ ಘೋಷಿಸಿದೆ” ಎಂದು ವಿಜಯೇಂದ್ರ ಹೇಳಿದರು.
ಗ್ಯಾರಂಟಿಗಳಿಂದ ಖಜಾನೆ ಖಾಲಿಯಾಗಿದೆ:
ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದ್ದು, ಸರಕಾರಿ ನೌಕರರಿಗೆ ಸಂಬಳ ನೀಡಲೂ ಹಣದ ಕೊರತೆ ಎದುರಾಗಿದೆ ಎಂದು ವಿಜಯೇಂದ್ರ ಆರೋಪಿಸಿದರು.
“ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಪೊಲೀಸ್ ಇಲಾಖೆ ಹಾಗೂ ನೀರಾವರಿ ಇಲಾಖೆಯ ಸಿಬ್ಬಂದಿಗೂ ಸಂಬಳ ನೀಡಲು ಹಣವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಸರಕಾರದ ನೈಜ ಹಣಕಾಸು ಸ್ಥಿತಿಯನ್ನು ಜನರ ಮುಂದೆ ಇಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶ್ವೇತಪತ್ರ ಹೊರಡಿಸಬೇಕು” ಎಂದು ಒತ್ತಾಯಿಸಿದರು.
ಆಕ್ಷೇಪ ಸಲ್ಲಿಸಲು ಫಾರಂ-7 ಮೂಲಕ ಅವಕಾಶವಿದೆ :
ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಮತದಾರರ ಪಟ್ಟಿಯಲ್ಲಿ ಅನುಮಾನಾಸ್ಪದವಾಗಿ ಕಂಡುಬರುವ ಮತದಾರರ ಬಗ್ಗೆ ಆಕ್ಷೇಪ ಸಲ್ಲಿಸಲು ಫಾರಂ-7 ಮೂಲಕ ಅವಕಾಶವಿದೆ. ಆದರೆ ಇದೇ ಫಾರಂ ವಿಚಾರವನ್ನು ಮುಂದಿಟ್ಟುಕೊಂಡು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸಲಾಗಿದ್ದು, ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವಿಜಯೇಂದ್ರ ಹೇಳಿದರು.
“ನಾವು ಸಲ್ಲಿಸಿದ ಅರ್ಜಿಗಳು ನಿಯಮಬದ್ಧವಾಗಿಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ಅವುಗಳನ್ನು ತಿರಸ್ಕರಿಸುತ್ತಾರೆ. ಅದಕ್ಕಾಗಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುವ ಅಗತ್ಯವೇನು?” ಎಂದು ಅವರು ಪ್ರಶ್ನಿಸಿದರು.






