33 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 31 ಜೀವಾವಧಿ ಕೈದಿಗಳು ಹಾಗೂ ಇಬ್ಬರು ಶಿಕ್ಷಾ ಕೈದಿಗಳು ಸೇರಿದಂತೆ ಒಟ್ಟು 33 ಕೈದಿಗಳನ್ನು ಸನ್ನಡತೆಯ ಆಧಾರದ ಮೇಲೆ ಬಿಡುಗಡೆಗೊಳಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್, ಕೇಂದ್ರ ಗೃಹ ಮಂತ್ರಾಲಯದ ಸಹಮತಿ ದೊರಕಿದ ನಂತರ ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ 33 ಕೈದಿಗಳನ್ನು ಬಿಡುಗಡೆಗೊಳಿಸಲು ಸಚಿವ ಸಂಪುಟ ನಿರ್ಣಯಿಸಿದ್ದು, ಅದರಂತೆ ಶೀಘ್ರದಲ್ಲಿಯೇ ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
‘ಅಕ್ಕ ಪಡೆ’ ಯೋಜನೆಯನ್ನು ಒಳಾಡಳಿತ ಇಲಾಖೆಯ ಸಹಯೋಗದೊಂದಿಗೆ ರಾಜ್ಯದ 31 ಜಿಲ್ಲೆ ಹಾಗೂ 5 ಪೊಲೀಸ್ ಆಯುಕ್ತಾಲಯಗಳಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಕಾನೂನು ಅರಿವು, ಜಾಗೃತಿ ಶಿಕ್ಷಣ, ತಕ್ಷಣದ ರಕ್ಷಣೆ ಮತ್ತು ನೆರವು ನೀಡುವ ಉದ್ದೇಶದಿಂದ ಅನುಷ್ಠಾನಗೊಳಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.





