ಸರಕಾರಿ ಜಾಗಗಳಲ್ಲಿ ಖಾಸಗಿ ಸಂಘಟನೆಗಳ ಚಟುವಟಿಕೆಗಳಿಗೆ ಪೂರ್ವಾನುಮತಿ ಕಡ್ಡಾಯ : ಸಚಿವ ಸಂಪುಟ ನಿರ್ಧಾರ

ಬೆಂಗಳೂರು, ಅ.16: ಸರಕಾರಿ ಜಾಗಗಳಲ್ಲಿ ಆರೆಸ್ಸೆಸ್ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿರುವುದು ವ್ಯಾಪಕ ಚರ್ಚೆಯಾಗುತ್ತಿರುವ ಬೆನ್ನಲ್ಲೆ, ರಾಜ್ಯ ಸಚಿವ ಸಂಪುಟವು ಸರಕಾರಿ ಜಾಗಗಳಲ್ಲಿ ಖಾಸಗಿ ಸಂಘಟನೆಗಳು, ಸಂಸ್ಥೆಗಳು ಯಾವುದೇ ಬಗೆಯ ಚಟುವಟಿಕೆಗಳನ್ನು ನಡೆಸಬೇಕಿದ್ದರೂ ಸಂಬಂಧಪಟ್ಟ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯಗೊಳಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಒದಗಿಸಿದರು.
ರಾಜ್ಯದಲ್ಲಿ ಹಲವಾರು ಖಾಸಗಿ ಸಂಸ್ಥೆಗಳು, ಸಂಘಗಳು ತಮ್ಮ ಚಟುವಟಿಕೆಗಳು, ಪ್ರಚಾರ, ತರಬೇತಿ, ಉತ್ಸವಗಳು ಹಾಗೂ ಸದಸ್ಯರ ಮತ್ತು ಬೆಂಬಲಿಗರ ಸಭೆಗಳು ನಡೆಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳು, ಸರಕಾರದ ಆಸ್ತಿಗಳು, ಜಮೀನುಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಇತ್ಯಾದಿಗಳನ್ನು ಸರಕಾರ ಅಥವಾ ಸಂಬಂಧಿತ ಇಲಾಖೆಗೆ ಮುಂಚಿತವಾಗಿ ಅನುಮತಿ ಪಡೆಯದೆ, ಅನೇಕ ಸಂದರ್ಭಗಳಲ್ಲಿ ಮಾಹಿತಿ ನೀಡದೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.
ಆದುದರಿಂದ, ಸಾರ್ವಜನಿಕ ಸ್ಥಳ ಹಾಗೂ ಸರಕಾರಿ ಜಾಗಗಳ ಬಳಕೆಗೆ ಸಂಬಂಧಿಸಿದಂತೆ ನಿಯಮಾವಳಿಗಳನ್ನು ರೂಪಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ವಿವರವಾದ ಸರಕಾರಿ ಆದೇಶವನ್ನು ಹೊರಡಿಸಲಾಗುವುದು. ಸರಕಾರದ, ಸರಕಾರಿ ಸಾಮ್ಯದ ಶಾಲಾ-ಕಾಲೇಜುಗಳು, ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಆವರಣದಲ್ಲಿ ಚಟುವಟಿಕೆಗಳನ್ನು ನಡೆಸಲು ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದು ಅವರು ತಿಳಿಸಿದರು.
ಉದ್ಯಾನವನಗಳು, ಆಟದ ಮೈದಾನಗಳು, ಇತರೆ ತೆರೆದ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸಲು ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅನುಮತಿ ಪಡೆಯಬೇಕು. ಸಾರ್ವಜನಿಕ ರಸ್ತೆಗಳು, ಸರಕಾರದ ಇತರೆ ಆಸ್ತಿ, ಸ್ಥಳಗಳ ಬಳಕೆಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು ಅಥವಾ ಪೊಲೀಸ್ ಅಧೀಕ್ಷಕರಿಂದ ಅನುಮತಿ ಪಡೆಯಬೇಕು ಎಂದು ಎಚ್.ಕೆ.ಪಾಟೀಲ್ ಹೇಳಿದರು.
ಸಕ್ಷಮ ಪ್ರಾಧಿಕಾರಗಳು ಅನುಮತಿ ನೀಡುವ ಸಂದರ್ಭದಲ್ಲಿ ಸಂವಿಧಾನ ಬದ್ಧವಾದ ನಾಗರಿಕರ ಹಕ್ಕುಗಳಿಗೆ ಚ್ಯುತಿ ಉಂಟಾಗದಂತೆ ಎಚ್ಚರಿಕೆ ವಹಿಸಲು ಅನುವಾಗುವಂತೆ ಸೂಕ್ತ, ವಿವರವಾದ ಮಾರ್ಗಸೂಚಿಯನ್ನು ಆಯಾ ಇಲಾಖೆಗಳು ಹೊರಡಿಸಬೇಕು ಎಂದು ಸಚಿವ ಸಂಪುಟ ನಿರ್ಣಯಿಸಿದೆ ಎಂದು ಅವರು ತಿಳಿಸಿದರು.
ನೂತನ ವಿಧೇಯಕ ಸಾಧ್ಯತೆ?: ಸರಕಾರಿ ಜಾಗಗಳಲ್ಲಿ ಖಾಸಗಿ ಸಂಘ, ಸಂಸ್ಥೆಗಳ ಚಟುವಟಿಕೆಗಳನ್ನು ನಿಯಂತ್ರಿಸುವ ಸಂಬಂಧ ‘ಸರಕಾರಿ ಆವರಣ ಮತ್ತು ಆಸ್ತಿಗಳ ಬಳಕೆ ನಿಯಂತ್ರಣ ಮಸೂದೆ-2025’ ಮಂಡಿಸಲು ಸರಕಾರ ಚಿಂತನೆ ನಡೆಸಿದೆ. ಈ ಸಂಬಂಧ ಕಾನೂನು ಇಲಾಖೆಯು ಕರಡು ಸಿದ್ಧಗೊಳಿಸಿದೆ ಎಂದು ತಿಳಿದು ಬಂದಿದೆ.
ಸರಕಾರ ಆದೇಶ ಉಲ್ಲಂಘಿಸಿ ಯಾರಾದರೂ ಚಟುವಟಿಕೆಗಳನ್ನು ನಡೆಸಿದರೆ ಅಂತಹ ಸಂಘ, ಸಂಸ್ಥೆಗಳಿಗೆ ದಂಡ ಹಾಗೂ ಜೈಲು ಶಿಕ್ಷೆ ವಿಧಿಸುವ ಅವಕಾಶವನ್ನು ಕಲ್ಪಿಸಿದೆ ಎಂದು ತಿಳಿದು ಬಂದಿದೆ. ಮೊದಲ ಬಾರಿ ನಿಯಮ ಉಲ್ಲಂಘನೆ ಮಾಡಿದರೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ.ದಂಡ, ಪುನರಾವರ್ತಿತ ಉಲ್ಲಂಘನೆಗಳಿಗೆ ಮೂರು ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎನ್ನಲಾಗಿದೆ.







