ಕಲಬುರಗಿಯಲ್ಲಿ ಮಹಾತ್ಮಾ ಗಾಂಧಿ, ನೆಹರೂ, ಇಂದಿರಾ ಗಾಂಧಿ ಪುತ್ಥಳಿ ಸ್ಥಾಪನೆಗೆ ಸಚಿವ ಸಂಪುಟ ತೀರ್ಮಾನ

ಎಚ್.ಕೆ.ಪಾಟೀಲ್
ಬೆಂಗಳೂರು : ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ, ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರೂ, ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಪುತ್ಥಳಿಗಳನ್ನು ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್, ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆಯನ್ನು ಉತ್ತೇಜಿಸುವ ಸಲುವಾಗಿ ಕೆಕೆಆರ್ಡಿಬಿ ವತಿಯಿಂದ ಒದಗಿಸುವ 50 ಕೋಟಿ ರೂ., ಮೊತ್ತದಲ್ಲಿ ಕಲಬುರಗಿಯಲ್ಲಿ ನೂತನ ಮೆಗಾ ಡೈರಿ ಪ್ರಾರಂಭಿಸುವ ಕಾಮಗಾರಿಯ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದರು.
ಕಲಬುರಗಿಯಲ್ಲಿ ಕೆಕೆಆರ್ಡಿಬಿ ವತಿಯಿಂದ ಪ್ರಾದೇಶಿಕ ಸಹಕಾರ ಭವನವನ್ನು ನಿರ್ಮಿಸುವ ಕಾಮಗಾರಿಯ ಕ್ರಿಯಾ ಯೋಜನೆಗೆ ಹಾಗೂ ಕಲಬುರಗಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಜಿಟಿಟಿಸಿ ಬಹುಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಿಂದ ಎರಡನೆ ಹಂತದಲ್ಲಿ 66.75 ಕೋಟಿ ರೂ., ವೆಚ್ಚದಲ್ಲಿ ಸ್ಥಾಪಿಸಲು ಒಪ್ಪಿಗೆ ನೀಡಲಾಗಿದೆ ಎಂದು ಸಚಿವರು ಹೇಳಿದರು.





