ಪರಿಶಿಷ್ಟರ ಅನುದಾನ ಗ್ಯಾರಂಟಿಗಳಿಗೆ ಬಳಕೆ ನಿಲ್ಲಿಸಿ : ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ಪರಿಶಿಷ್ಟರ ಕಲ್ಯಾಣಕ್ಕಾಗಿ ಎಸ್ಸಿಪಿ-ಟಿಎಸ್ಪಿ ಯೋಜನೆಯಡಿ ಮೀಸಲಿಟ್ಟಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು. ಇಲ್ಲವಾದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಲಾಗುವುದು ಎಂದು ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳು ತಾತ್ಕಾಲಿಕ ಸಹಾಯ ನೀಡಿದರೂ, ಪರಿಶಿಷ್ಟ ಸಮುದಾಯದ ದೀರ್ಘಕಾಲಿಕ ಶಾಶ್ವತ ಉನ್ನತಿಗೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ಗ್ಯಾರಂಟಿಗಳಿಗೆ ಎಸ್ಸಿಪಿ-ಟಿಎಸ್ಪಿ ಅನುದಾನ ವಿನಿಯೋಗದ ಕುರಿತು ಪುನರ್ ಪರಿಶೀಲನೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಿಟ್ಟಿದ್ದ ಒಟ್ಟು ಹಣದಲ್ಲಿ 39ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿದೆ. ಗ್ಯಾರಂಟಿಗಳು ಪ್ರಾಥಮಿಕ ಅಗತ್ಯಗಳನ್ನು ಪೂರೈಸುವಂತಾಗಿದ್ದರೂ, ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಕಡಿಮೆಯಾಗುತ್ತಿದೆ. ಇದರಿಂದ ಪರಿಶಿಷ್ಟ ವರ್ಗಗಳ ದೀರ್ಘಕಾಲಿಕ ಪ್ರಗತಿ ಕುಂಠಿತವಾಗುವ ಅಪಾಯ ಇದೆ ಎಂದು ಅವರು ಟೀಕಿಸಿದರು.





