ಚಾಮರಾಜನಗರ: ಕೌಟುಂಬಿಕ ಕಲಹ ಹಿನ್ನೆಲೆ; ಗೃಹಿಣಿ ಆತ್ಮಹತ್ಯೆ

ಚಾಮರಾಜನಗರ: ಗೃಹಿಣಿಯೋರ್ವಳು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಂಡ್ಲುಪೇಟೆ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ಮೃತ ಮಹಿಳೆಯನ್ನು ಗುಂಡ್ಲುಪೇಟೆ ತಾಲೂಕಿನ ಬೇಗೂರು ಗ್ರಾಮದ ಸ್ವಾತಿ(25)ಎಂದು ಗುರುತಿಸಲಾಗಿದೆ. ಗುಂಡ್ಲುಪೇಟೆ ಪಟ್ಟಣದ ದರ್ಶನ್ ಲೇಔಟ್ ನಿವಾಸಿ ವಿನಯ್ ಎಂಬಾತನೊಂದಿಗೆ ಎಂಟು ತಿಂಗಳ ಹಿಂದೆ ಸ್ವಾತಿಯ ವಿವಾಹವಾಗಿತ್ತು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿ ಮೃತ ಮಹಿಳೆಯ ಅತ್ತೆ ನಂದಿನಿ ಹಾಗೂ ಪತಿ ವಿನಯ್ ನನ್ನು ವಶಕ್ಕೆ ಪಡೆಯಲಾಗಿದೆ.
ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಚಾಮರಾಜನಗರ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಪದ್ಮಿನಿ ಸಾಹೂ, ಡಿವೈಎಸ್ಪಿ ಲಕ್ಷ್ಮಯ್ಯ, ಪೊಲೀಸ್ ಇನ್ಸ್ ಪೆಕ್ಟರ್ ಪರಶಿವಮೂರ್ತಿ, ಸಬ್ ಇನ್ಸ್ ಪೆಕ್ಟರ್ ಸಾಹೇಬಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಸಲುವಾಗಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಗುಂಡ್ಲುಪೇಟೆ ಪಟ್ಟಣದ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.





