ಜಿಲ್ಲಾವಾರು ಶಾಸಕರೊಂದಿಗೆ ಸಭೆಗಳನ್ನು ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Photo:X/@CMofKarnataka
ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಶಾಸಕರೊಂದಿಗೆ ಪ್ರತ್ಯೇಕವಾಗಿ ಸಭೆಗಳನ್ನು ನಡೆಸಿ, ಪಕ್ಷ ಸಂಘಟನೆ, ಗ್ಯಾರಂಟಿಗಳ ಅನುಷ್ಠಾನ ಹಾಗೂ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾಹಿತಿ ಸಂಗ್ರಹಿಸಿದ ಬೆನ್ನಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾವಾರು ಶಾಸಕರೊಂದಿಗೆ ಸಭೆಗಳನ್ನು ಆರಂಭಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಮೊದಲು ತವರು ಜಿಲ್ಲೆ ಮೈಸೂರು, ಚಾಮರಾಜನಗರ, ತುಮಕೂರು, ಕೊಡಗು, ಹಾಸನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ಜೊತೆ ಚರ್ಚೆ ನಡೆಸಿದ ಸಿದ್ದರಾಮಯ್ಯ, ಮೂರು ದಿನಗಳ ಕಾಲ ಜಿಲ್ಲಾವಾರು ಶಾಸಕರೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ. ಆದರೆ, ಇಂದಿನ ಸಭೆಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ ಆಹ್ವಾನ ಇಲ್ಲದಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಸಭೆಯಲ್ಲಿ ಚರ್ಚಿಸಲಾದ ಸಂಗತಿಗಳು: ಜಿಲ್ಲೆಗಳಲ್ಲಿ ಪ್ರಮುಖವಾಗಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳ ಸ್ಥಿತಿ ಗತಿ, ಕೃಷಿ ಚಟುವಟಿಕೆಗಳು ಮತ್ತು ಬಿಡುಗಡೆಯಾಗಿರುವ ಅನುದಾನದಲ್ಲಿ ಖರ್ಚಾಗಿರುವ ಹಣದ ಪ್ರಮಾಣ, ಕಾಮಗಾರಿ ಪೂರ್ಣಗೊಳಿಸಲು ಕಾಲಾವಧಿ ನಿಗಧಿ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಕ್ಷೇತ್ರವಾರು ಬಿಡುಗಡೆಯಾಗಿರುವ ಅನುದಾನ, ಇಲಾಖಾವಾರು ಅನುದಾನಗಳ ಬಗ್ಗೆಯೂ ಚರ್ಚೆ ನಡೆಯಿತು. ಇದಲ್ಲದೇ, ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳ ಜಾರಿಯ ಸ್ಥಿತಿ ಗತಿ ಹೇಗಿದೆ ಎಂಬುದರ ಕುರಿತು ಶಾಸಕರಿಂದ ಮುಖ್ಯಮಂತ್ರಿ ಮಾಹಿತಿಯನ್ನು ಪಡೆದುಕೊಂಡರು.
ಶಾಸಕರ ಅನುದಾನದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳು, ಪ್ರಮುಖವಾಗಿ ಕ್ಷೇತ್ರಕ್ಕೆ ಆಗಬೇಕಾದ ಕೆಲಸಗಳಿಗೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ಮುಖ್ಯಮಂತ್ರಿ ಮಾಹಿತಿ ಪಡೆದು ಶಾಸಕರಿಗೆ ಸಲಹೆ, ಸೂಚನೆಗಳನ್ನು ನೀಡಿದರು.
ಗ್ಯಾರಂಟಿಗಳ ಯಶಸ್ವಿ ಜಾರಿಯಿಂದ ಜಿಲ್ಲೆಯ ಆರ್ಥಿಕತೆ ಮೇಲೆ ಆಗಿರುವ ಸಕಾರಾತ್ಮಕ ಪರಿಣಾಮಗಳ ಬಗ್ಗೆ ಶಾಸಕರು ಗಮನ ಸೆಳೆದರು. ಸರಕಾರ ಪ್ರತಿ ಕ್ಷೇತ್ರಕ್ಕೂ ಸಾವಿರ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕೆಲಸಗಳನ್ನು ಒದಗಿಸಿದ್ದು, ಇದನ್ನು ಕ್ಷೇತ್ರದ ಜನರ, ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಜೊತೆಗೆ ಅವರ ಫಲಾನುಭವಿಗಳ ಜೊತೆ ಸಂಪರ್ಕದಲ್ಲಿ ಇರುವಂತೆ ಮುಖ್ಯಮಂತ್ರಿ ಸೂಚನೆ ನೀಡಿದರು.
ಎಲ್ಲ ಕೆಡಿಪಿ ಸಭೆಗಳಲ್ಲೂ ಶಾಸಕರು, ಸಚಿವರು ಅರ್ಥಪೂರ್ಣವಾಗಿ ಪಾಲ್ಗೊಳ್ಳಬೇಕು. ಅದಕ್ಕೆ ಮೊದಲು ಜನರ ಸಮಸ್ಯೆಗಳ ಬಗ್ಗೆ, ಕಾಮಗಾರಿಗೆ ಇರುವ ತಾಂತ್ರಿಕ ತೊಂದರೆಗಳ ಬಗ್ಗೆ, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ನಿಧಾನ ಧೋರಣೆ ಬಗ್ಗೆ ಕೆಡಿಪಿ ಸಭೆಗಳಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳುವಂತೆ ಸಿದ್ದರಾಮಯ್ಯ ಸೂಚಿಸಿದರು.
ಸಭೆಗಳಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯಕಾರ್ಯದರ್ಶಿ ಅಂಜುಮ್ ಪರ್ವೇಝ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಚಾಮರಾಜ ನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಆಯಾ ಜಿಲ್ಲೆಗಳ ಕಾಂಗ್ರೆಸ್ ಶಾಸಕರು ಭಾಗವಹಿಸಿದ್ದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರಿಗೆ ಮಂಜೂರು ಮಾಡಿರುವ 50 ಕೋಟಿ ರೂ.ಗಳ ವಿಶೇಷ ಅನುದಾನದ ಕುರಿತು ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಈ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾಮಗಾರಿಗಳಿಗೆ ಎಷ್ಟು ಹಂಚಿಕೆ ಮಾಡಬೇಕು. ಶಾಸಕರ ವಿವೇಚನಾ ಕೋಟದಡಿಯಲ್ಲಿ ಎಷ್ಟು ಖರ್ಚು ಮಾಡಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿದ್ದೇವೆ. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಎಲ್ಲ ಶಾಸಕರು ಒಗ್ಗಟ್ಟಾಗಿ, ಸಂಯಮದಿಂದ ಕೆಲಸ ಮಾಡಲು ನಿರ್ಧರಿಸಿದ್ದೇವೆ. ಈ ಸಭೆಯಲ್ಲಿ ಯಾವುದೆ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ಮಾಡಿಲ್ಲ’
-ಡಾ.ಜಿ.ಪರಮೇಶ್ವರ್, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ







