ಚಿತ್ರದುರ್ಗ ಬಸ್ ದುರಂತ | ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪದ ಗೊರ್ಲತ್ತು ಬಳಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಅವರು, ಚಿತ್ರದುರ್ಗದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು. ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ.
5 ಮಂದಿ ಸಜೀವ ದಹನ :
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಲಾರಿ ಮತ್ತು ಸ್ಲೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.
ಲಾರಿಯೊಂದು ಡಿವೈಡರ್ ದಾಟಿ ಎದುರುಗಡೆಯಿಂದ ಬರುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ ಹೊತ್ತಿ ಉರಿದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಢಿಕ್ಕಿಯ ರಭಸಕ್ಕೆ ಬಸ್ ರಸ್ತೆ ಮಧ್ಯೆಯಲ್ಲೇ ಬೆಂಕಿಗಾಹುತಿಯಾಯಿತು ಎನ್ನಲಾಗಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಿದ ಕಾರಣ ಬಸ್ ನೊಳಗಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ಪ್ರಾಣ ಕಳೆದುಕೊಂಡಿದ್ದಾರೆ. ಲಾರಿ ಹಿರಿಯೂರಿನಿಂದ ಬೆಂಗಳೂರಿನತ್ತ ಸಾಗುತ್ತಿದ್ದರೆ, ಬಸ್ ಬೆಂಗಳೂರಿನಿಂದ ಶಿವಮೊಗ್ಗದತ್ತ ಪ್ರಯಾಣಿಸುತ್ತಿತ್ತು. ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಕಂಟೇನರ್ ಲಾರಿ ಚಾಲಕ ಕುಲದೀಪ್ ಮೃತಪಟ್ಟಿದ್ದಾರೆ.







