ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಕ್ಲೀನ್ಚಿಟ್ ನೀಡಿದ ನ್ಯಾ.ದೇಸಾಯಿ ಆಯೋಗ: ಎಚ್.ಕೆ. ಪಾಟೀಲ್

ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ನ್ಯಾ.ಪಿ.ಎನ್. ದೇಸಾಯಿ ಆಯೋಗವು ತನ್ನ ವರದಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಕ್ಲೀನ್ಚಿಟ್ ನೀಡಿದೆ.
ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಈ ವಿಷಯವನ್ನು ತಿಳಿಸಿದರು.
ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸಲು ಸರಕಾರವು ನ್ಯಾ.ದೇಸಾಯಿ ಆಯೋಗವನ್ನು ರಚಿಸಿತ್ತು. ಅವರು ಸಮಗ್ರವಾಗಿ ತನಿಖೆ ಮಾಡಿ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆ ವರದಿಯ ಕುರಿತು ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು ಎಂದು ಅವರು ಹೇಳಿದರು.
ವರದಿಯಲ್ಲಿ ಮುಖ್ಯಮಂತ್ರಿ ಹಾಗೂ ಅವರ ಕುಟುಂಬದ ವಿರುದ್ಧ ಯಾವುದೇ ಆರೋಪಗಳನ್ನು ದಾಖಲಿಸಿಲ್ಲ. ಆದರೆ, ಕೆಲವು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿಫಾರಸ್ಸು ಮಾಡಿದ್ದಾರೆ. ಅವರು ಸಲ್ಲಿಸಿರುವ ಶಿಫಾರಸ್ಸುಗಳನ್ನು ಸಚಿವ ಸಂಪುಟ ಒಪ್ಪಿಕೊಂಡಿದ್ದು, ಅದರಂತೆ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಾಮಗಾರಿಗಳಲ್ಲಿ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಆರೋಪಗಳ ಕುರಿತು ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಆಯೋಗ ಸಲ್ಲಿಸಿರುವ ವಿಚಾರಣಾ ವರದಿಯನ್ನು ಸಚಿವ ಸಂಪುಟ ಸ್ವೀಕರಿಸಿದೆ. ಆ ವರದಿಯ ಕುರಿತು ಚರ್ಚೆ ಅಪೂರ್ಣವಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
60 ಕ್ರಿಮಿನಲ್ ಪ್ರಕರಣ ವಾಪಸ್: ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ರೈತರು, ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ 60 ಕ್ರಿಮಿನಲ್ ಮೊಕದ್ದಮೆಗಳನ್ನು ಅಭಿಯೋಜನೆಯಿಂದ ಹಿಂಪಡೆಯಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.







