ಉರ್ದು ಅಕಾಡೆಮಿಗೆ ಅನುದಾನ ಹೆಚ್ಚಳ, ಶೀಘ್ರದಲ್ಲಿಯೇ ಶಾಸಕರ ಪ್ರತ್ಯೇಕ ಸಭೆ : ಸಿಎಂ ಡಿ.ಕೆ.ಶಿವಕುಮಾರ್
ಕರ್ನಾಟಕ ಉರ್ದು ಅಕಾಡೆಮಿ ವತಿಯಿಂದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ

ಬೆಂಗಳೂರು : ಉರ್ದು ಭಾಷಾ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಸಲುವಾಗಿ ಕರ್ನಾಟಕ ರಾಜ್ಯ ಉರ್ದು ಅಕಾಡೆಮಿಗೆ ಹೆಚ್ಚಿನ ಅನುದಾನ ಒದಗಿಸಲಾಗುವುದು.ಇದರ ಜತೆಗೆ ಅಲ್ಪಸಂಖ್ಯಾತ ಸಮುದಾಯದ ಶಾಸಕರ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸೋಮವಾರ ನಗರದ ಪುರಭವನ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಮತ್ತು ಕರ್ನಾಟಕ ಉರ್ದು ಅಕಾಡೆಮಿ ವತಿಯಿಂದ ಆಯೋಜಿಸಿದ್ದ 2025ನೆ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ, ಪುಸ್ತಕಗಳ ಬಿಡುಗಡೆ ಹಾಗೂ ಜಶ್ನ್-ಎ-ಉರ್ದು ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತ ಸಮುದಾಯಗಳ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರಕಾರ ಬದ್ಧವಾಗಿದೆ. ಈ ಸಂಬಂಧ ಕ್ರೈಸ್ತ, ಮುಸ್ಲಿಮ್, ಜೈನ, ಬೌದ್ದ ಸೇರಿದಂತೆ ವಿವಿಧ ಅಲ್ಪಸಂಖ್ಯಾತ ಸಮುದಾಯಗಳ ನಾಯಕರು ಹಾಗೂ ಶಾಸಕರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.
ಚುನಾವಣಾ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು, ವಿವಿಧ ಸಂದರ್ಭಗಳಲ್ಲಿ ಸಮುದಾಯಗಳಿಗೆ ಕೊಟ್ಟಿರುವ ಮಾತುಗಳನ್ನು ಈಡೇರಿಸುವುದು ನಮ್ಮ ಜವಾಬ್ದಾರಿ. ಯಾರ ಮನಸ್ಸಿಗೂ ನೋವಾಗದಂತೆ, ಎಲ್ಲರ ಭಾವನೆಗಳಿಗೆ ಗೌರವ ನೀಡಿ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಸಭೆಗಳನ್ನು ನಡೆಸಲಾಗುತ್ತಿದೆ. ಸಂವಿಧಾನದ ಅಡಿಯಲ್ಲಿ ಸಿಗಬೇಕಾದ ಗೌರವ ಮತ್ತು ಹಕ್ಕುಗಳನ್ನು ಕಾಪಾಡುತ್ತೇವೆ ಎಂದು ಅವರು ಹೇಳಿದರು.
ಕೆಲವರಿಗೆ ಅಲ್ಪಸಂಖ್ಯಾತ ಸಮುದಾಯಗಳ ಬಗ್ಗೆ ನಂಬಿಕೆ ಇಲ್ಲದಿರಬಹುದು. ಬೇರೆಯವರಿಗೆ ನಂಬಿಕೆ ಇಲ್ಲ ಎಂಬ ಕಾರಣಕ್ಕೆ ಇಲಾಖೆ ಸ್ಥಗಿತಗೊಳಿಸಲು ಸಾಧ್ಯವಿಲ್ಲ. ಅಲ್ಪಸಂಖ್ಯಾತರ ಹಿತಾಸಕ್ತಿಯನ್ನು ಕಾಪಾಡಲು ಮತ್ತು ಅವರ ಪರವಾಗಿ ಧ್ವನಿಯಾಗಲು ನಮ್ಮ ಸರಕಾರವಿದೆ. ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ ಎಂದ ಅವರು, ನಮ್ಮ ಸರಕಾರ ಸಂವಿಧಾನದ ಚೌಕಟ್ಟಿನಲ್ಲಿಯೇ ಆಡಳಿತ ನಡೆಸಲಿದೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ನಾವೆಲ್ಲರೂ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡೇ ಪ್ರಮಾಣವಚನ ಸ್ವೀಕರಿಸಿದ್ದೇವೆ. ಸಂವಿಧಾನವನ್ನು ಉಳಿಸುವುದು, ಎಲ್ಲ ಜಾತಿ, ಧರ್ಮಗಳಿಗೂ ಸಮಾನ ಗೌರವ ಮತ್ತು ರಕ್ಷಣೆ ನೀಡುವ ಮೂಲಕ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವುದು ಸರಕಾರದ ಬದ್ಧತೆ ಎಂದರು.
ಉರ್ದು ಹೃದಯದ ಭಾಷೆ: ಉರ್ದು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ಭಾಷೆಯಲ್ಲ. ಅದು ಹೃದಯದ ಭಾಷೆ. ಸಾಹಿತ್ಯ, ಕಾವ್ಯ ಮತ್ತು ಕವಿತೆ ಮೂಲಕ ಜನರ ಮನಸ್ಸನ್ನು ಮುಟ್ಟುವ ಶಕ್ತಿ ಅದಕ್ಕಿದೆ. ಈ ಭಾಷೆಗೆ ಯಾವುದೇ ಗಡಿಯಿಲ್ಲ. ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಉರ್ದು ಭಾಷೆಮತ್ತು ಸಂಸ್ಕೃತಿಯನ್ನು ಎಲ್ಲರೂ ಗೌರವಿಸಬೇಕು. ಯಾವ ಭಾಷೆಯಲ್ಲಿದ್ದರೂ ಜ್ಞಾನಕ್ಕೆ ಗೌರವ ನೀಡಬೇಕು. ಇಂಗ್ಲಿಷ್ ಸೇರಿದಂತೆ ಯಾವುದೇ ಭಾಷೆಯನ್ನು ಅಗೌರವದಿಂದ ಕಾಣಬಾರದು. ಭಾಷೆ ಎನ್ನುವುದು ಸಂವಹನ ಮಾಧ್ಯಮ. ಪ್ರತಿಯೊಬ್ಬರೂ ತಮ್ಮ ಮಾತೃಭಾಷೆಯನ್ನು ಪ್ರೀತಿಸಿ ಗೌರವಿಸಬೇಕು ಎಂದು ಡಿ.ಕೆ.ಶಿವಕುಮಾರ್ ಪ್ರತಿಪಾದಿಸಿದರು.
ಸಮಾರಂಭದಲ್ಲಿ ಸಚಿವರಾದ ಯು.ಟಿ.ಖಾದರ್, ರಿಝ್ವಾನ್ ಆರ್ಶದ್, ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್, ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್, ಶಾಸಕರಾದ ಖನೀಜ್ ಫಾತಿಮಾ, ಯಾಸಿರ್ ಅಹ್ಮದ್ ಖಾನ್ ಪಠಾಣ್, ಕೆಎಂಡಿಸಿ ಅಧ್ಯಕ್ಷ ಬಿ.ಕೆ.ಅಲ್ತಾಫ್ ಖಾನ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ, ಕರ್ನಾಟಕ ರಾಝ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹ್ಮದ್, ಕರ್ನಾಟಕ ರಾಜ್ಯ ಉರ್ದು ಅಕಾಡೆಮಿ ಅಧ್ಯಕ್ಷ ಮುಹಮ್ಮದ್ ಅಲಿ ಖಾಜಿ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಕಾರ್ಯದರ್ಶಿ ಸಲ್ಮಾ ಕೆ.ಫಹೀಮ್, ಹಿರಿಯ ಪತ್ರಕರ್ತ ಬೆಳಗೂರು ಸಮೀವುಲ್ಲಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
‘ನನಗೆ ಉರ್ದು ಭಾಷೆ ಗೊತ್ತಿಲ್ಲ, ಕಲಿಯದ ಕಾರಣ ನಾನು ಇಂದು ಅಂಗವಿಕಲನಂತೆ ನಿಮ್ಮ ಮುಂದೆ ಇದ್ದೇನೆ. ಆದರೆ, ಮುಂದಿನ ಬಾರಿ ನಾನು ಉರ್ದುವಿನಲ್ಲಿಯೇ ಭಾಷಣ ಮಾಡುತ್ತೇನೆ. ನಮ್ಮ ಸಂಸ್ಕೃತಿ, ಪರಂಪರೆ ಉಳಿಯಬೇಕು ಎಂದರೆ ಉರ್ದು ಭಾಷೆ ಮುಖ್ಯವಾಗಿ ಉಳಿಯಬೇಕು. ಇಂದಿನ ಕಾಲಘಟ್ಟದಲ್ಲಿ ಉರ್ದು ಬೆಳವಣಿಗೆಗೆ ಮತ್ತಷ್ಟು ಉತ್ತೇಜನ ನೀಡುವ ಕೆಲಸವನ್ನು ನಾನು ಮಾಡುವೆ’
-ಯು.ಟಿ.ಖಾದರ್, ಸಚಿವ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ






