ಸಂಪುಟದ ಎರಡು ಖಾಲಿ ಸ್ಥಾನ ಭರ್ತಿಗೆ ಕಸರತ್ತು; ದಿಲ್ಲಿಗೆ ಮುಖ್ಯಮಂತ್ರಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರು : ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾಲಿ ಇರುವ ಸಚಿವ ಸ್ಥಾನಗಳ ಭರ್ತಿಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿವೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನ.28ರಂದು ದಿಲ್ಲಿಗೆ ತೆರಳುತ್ತಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಸಂಪುಟದಲ್ಲಿ ಖಾಲಿ ಉಳಿದಿರುವ ಎರಡು ಸಚಿವ ಸ್ಥಾನಗಳ ಭರ್ತಿ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಶನಿವಾರ ಮಧ್ಯಾಹ್ನ ದಿಲ್ಲಿಗೆ ತೆರಳುತ್ತಿದ್ದು, ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿ ಸಚಿವ ಸ್ಥಾನಗಳಿಗೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಪ್ರಯತ್ನ ನಡೆಸಲಿದ್ದಾರೆ ಎಂದು ಗೊತ್ತಾಗಿದೆ.
ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ ಎರಡು ಸ್ಥಾನಗಳು ಖಾಲಿ ಉಳಿದಿವೆ. ಅದರಲ್ಲೂ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಇಲ್ಲದಿರುವುದು ಕಾಂಗ್ರೆಸ್ ಪಕ್ಷದೊಳಗೆ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂಬ ಬೇಡಿಕೆ ಹಲವು ದಿನಗಳಿಂದ ಕೇಳಿಬರುತ್ತಿದೆ.
ಮುಂಬರುವ ಡಿ. 2ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನಕ್ಕೂ ಮುನ್ನವೇ ಸಂಪುಟದ ಖಾಲಿ ಸ್ಥಾನಗಳನ್ನು ಭರ್ತಿ ಮಾಡುವ ಮೂಲಕ ಪ್ರತಿಪಕ್ಷಗಳ ಟೀಕೆಗಳಿಗೆ ಅವಕಾಶ ನೀಡದಿರಲು ಆಡಳಿತಾರೂಢ ಕಾಂಗ್ರೆಸ್ ನಾಯಕತ್ವ ಪ್ರಯತ್ನಿಸುತ್ತಿದೆ ಎನ್ನಲಾಗಿದೆ.






