ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಸಿಎಂ ಸಿದ್ದರಾಮಯ್ಯ
"ಮುಂದಿನ ಆರ್ಥಿಕ ವರ್ಷದಿಂದ ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ"

ಬೆಂಗಳೂರು : ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಗುರುವಾರ ಅಂತರರಾಷ್ಟ್ರೀಯ ʼವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025ʼ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರ ಹಲವು ದಿನಗಳ ಬೇಡಿಕೆಯಾದ ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಯೋಜನೆಯನ್ನು ಜಾರಿಗೆ ತರಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಭಾರತ ರಫ್ತು ಮಾಡುತ್ತಿರುವುದು ಹೆಮ್ಮೆಯ ವಿಷಯ :
ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ಆಹಾರದ ಕೊರತೆಯಿತ್ತು. ಆದರೆ ಈಗ ಹಲವಾರು ಆಹಾರಧಾನ್ಯಗಳನ್ನು ಭಾರತ ರಫ್ತು ಮಾಡುತ್ತಿರುವುದು ಹೆಮ್ಮೆಯ ವಿಷಯ. ವಿರಳ ಮಳೆಯಿರುವ ಪ್ರದೇಶಗಳಲ್ಲಿ ಹೆಚ್ಚಾಗಿ ಸಾವಯವ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತದೆ. ಕೃಷಿ ಕುಟುಂಬಕ್ಕೆ ಸೇರಿದ ತಮ್ಮ ಕುಟುಂಬದವರೂ ಕೂಡ ಸಿರಿಧಾನ್ಯಗಳ ಕೃಷಿ ಮಾಡುತ್ತಿದ್ದುದನ್ನು ಸ್ಮರಿಸಿದ ಸಿಎಂ, ರಾಗಿ ತಿಂದವನು ನಿರೋಗಿ ಎಂಬಂತೆ, ಸಿರಿಧಾನ್ಯಗಳ ಸೇವೆನೆ ಆರೋಗ್ಯಕ್ಕೆ ಉತ್ತಮವಾಗಿದೆ ಎಂದು ತಿಳಿಸಿದರು.
ಸಿರಿಧಾನ್ಯ ಉತ್ಪಾದನ-ಕರ್ನಾಟಕ 3ನೇ ಸ್ಥಾನ :
ಭಾರತದಲ್ಲಿ ಸಿರಿಧಾನ್ಯಗಳ ಉತ್ಪಾದನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹೆಚ್ಚಿನ ಒತ್ತು ನೀಡಿದೆ. ಸಾವಯವ ಕೃಷಿ ವಿಸ್ತೀರ್ಣದಲ್ಲಿ ಭಾರತವು ವಿಶ್ವದಲ್ಲಿ 2ನೇ ಸ್ಥಾನ ಹಾಗೂ ಒಟ್ಟು ಸಾವಯವ ಉತ್ಪಾದಕರಲ್ಲಿ ಮೊದಲನೇ ಸ್ಥಾನದಲ್ಲಿದೆ. ವಿಶ್ವದಲ್ಲಿ ಅಂದಾಜು 903.61 ಲಕ್ಷ ಟನ್‌ಗಳಷ್ಟು ಸಿರಿಧಾನ್ಯಗಳ ಉತ್ಪಾದನೆಯಾಗುತ್ತಿದ್ದು, ಇದರಲ್ಲಿ ಶೇ.38.50 ರಷ್ಟು ಪಾಲು ನಮ್ಮ ಭಾರತ ದೇಶದ್ದಾಗಿದ್ದು, ವಿಶ್ವದ ಅತಿದೊಡ್ಡ ಸಿರಿಧಾನ್ಯ ಉತ್ಪಾದನೆಯಲ್ಲಿ ಮುಂಚೂಣಿ ರಾಷ್ಟ್ರವಾಗಿದೆ. ನಮ್ಮ ರಾಜ್ಯವು ಸಿರಿಧಾನ್ಯಗಳ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ದೇಶದಲ್ಲಿಯೇ 3ನೇ ಸ್ಥಾನದಲ್ಲಿರುತ್ತದೆ ಎಂದರು.
“ಸಾವಯವ ಕೃಷಿ ನೀತಿ”
ಭಾರತದ ಒಟ್ಟು ಸಾವಯವ ರಫ್ತು ಪ್ರಮಾಣವು 2.61 ಲಕ್ಷ ಟನ್ ಆಗಿದ್ದು, ಈ ಪೈಕಿ ಸಾವಯವದ ಆಹಾರ ರಫ್ತಿನಿಂದ ಸುಮಾರು 4008 ಕೋಟಿ ರೂ.ಗಳಷ್ಟು ಆದಾಯವಾಗಿರುತ್ತದೆ. ಸಾವಯವ ಮತ್ತು ಸಿರಿಧಾನ್ಯಗಳಿಗೆ ವ್ಯವಸ್ಥಿತ ಮಾರುಕಟ್ಟೆ ಮತ್ತು ಸರಬರಾಜು ಸರಪಳಿಯನ್ನು ಕಲ್ಪಿಸುವ ಉದ್ದೇಶದೊಂದಿಗೆ ಪರಿಷ್ಕೃತ “ಸಾವಯವ ಕೃಷಿ ನೀತಿ” ಯನ್ನು ನಮ್ಮ ಸರಕಾರವು 2017ರಲ್ಲಿ ಹೊರತಂದಿದೆ. ರಾಜ್ಯದ ರೈತರಲ್ಲಿ ಸಾವಯವ ಕೃಷಿ ಪದ್ಧತಿಯ ಬಗ್ಗೆ ಅರಿವು ಮೂಡಿಸಲು”ಸಾವಯವ ಭಾಗ್ಯ ಯೋಜನೆಯನ್ನು” 2013 ನೇ ಸಾಲಿನಲ್ಲಿ ಹೊರತಂದು ಹೋಬಳಿಮಟ್ಟದಲ್ಲಿ ಮಾದರಿ ಸಾವಯವ ಗ್ರಾಮಗಳನ್ನು ಸ್ಥಾಪಿಸಿ ರೈತರನ್ನು ಒಗ್ಗೂಡಿಸಿ ಉತ್ತೇಜಿಸಲಾಗಿದೆ ಎಂದರು.
ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ :
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಕರ್ನಾಟಕ ಸರ್ಕಾರ ಸಿರಿಧಾನ್ಯಗಳ ಕೃಷಿ, ಮಾರುಕಟ್ಟೆ ಹಾಗೂ ಇತರೆ ಸೌಲಭ್ಯಗಳನ್ನು ನೀಡುವ ಮೂಲಕ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ ಎಂದರು.







