ನಾಯಕತ್ವ ಬದಲಾವಣೆ, ಸಂಪುಟ ಪುನರ್ರಚನೆ | ಹೈಕಮಾಂಡ್ ತೀರ್ಮಾನಕ್ಕೆ ಪ್ರತಿಯೊಬ್ಬರೂ ಬದ್ಧರಾಗಿರಬೇಕು : ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನರ್ರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರಿಷ್ಠರ ತೀರ್ಮಾನಕ್ಕೆ ಪಕ್ಷದ ಪ್ರತಿಯೊಬ್ಬರೂ ಬದ್ಧರಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ನ ಕೆಲ ಶಾಸಕರು ಪಕ್ಷದ ವರಿಷ್ಠರನ್ನು ಭೇಟಿಯಾಗಲು ದಿಲ್ಲಿಗೆ ತೆರಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದಂತೆ ನಾನೆಂದೂ ಮಾತಿಗೆ ತಪ್ಪುವುದಿಲ್ಲ. ರಾಜ್ಯದ ಜನರಿಗೆ ನೀಡಿದ ಗ್ಯಾರಂಟಿಯ ಭರವಸೆಯನ್ನು ಈಡೇರಿಸಿದ್ದೇನೆ. ಮುಖ್ಯಮಂತ್ರಿಯಾಗಿ ನಾನೇ ಮುಂದುವರೆದು, ಮುಂದಿನ ಬಜೆಟ್ ಗಳನ್ನು ನಾನೇ ಮಂಡಿಸುವೆ. ಇಂದು ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಆಗಮಿಸಲಿದ್ದು, ನಾಳೆ ಅವರನ್ನು ಭೇಟಿಯಾಗುವ ನಿರೀಕ್ಷೆಯಿದೆ ಎಂದರು.
ಸರಕಾರದಿಂದ 10 ಲಕ್ಷ ಮೆ.ಟನ್ ಖರೀದಿ :
ಮೆಕ್ಕೆ ಜೋಳದ ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರಿಗೆ ಎಲ್ಲ ರೀತಿಯ ಸಹಾಯವನ್ನು ಸರಕಾರ ಮಾಡಲಿದೆ. ರಾಜ್ಯ ಸರಕಾರ, ರೈತರಿಂದ ಸುಮಾರು 10 ಲಕ್ಷ ಮೆ.ಟನ್ ಮೆಕ್ಕೆಜೋಳ ಖರೀದಿಗೆ ಖರೀದಿ ಕೇಂದ್ರ ಸ್ಥಾಪಿಸಲು ಸೂಚನೆ ನೀಡಲಾಗಿದೆ. ದೇಶದಲ್ಲಿಯೇ ಹೇರಳವಾಗಿ ಮೆಕ್ಕೆಜೋಳವನ್ನು ಬೆಳೆದಿದ್ದು, ಅದನ್ನು ಆಮದು ಮಾಡಿಕೊಳ್ಳದಂತೆ ಕೇಂದ್ರ ಸರಕಾರವನ್ನು ಪತ್ರಮುಖೇನ ಕೋರಲಾಗುವುದು ಎಂದರು.





