ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ ಸಂಖ್ಯೆ | ಕೊರೋನಾ ಸಹಾಯವಾಣಿ ಪ್ರಾರಂಭ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೋನಾ ಸಹಾಯವಾಣಿ ಪ್ರಾರಂಭ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಇಂದಿಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸೋಮವಾರ ನಗರದಲ್ಲಿರುವ ಕಾವೇರಿ ನಿವಾಸದಲ್ಲಿ ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆಯೋಜಿಸಿದ್ದ ಆರೋಗ್ಯ ಶಿಕ್ಷಣ ಇಲಾಖೆ ಸಚಿವ ಮತ್ತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೆರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದೆ. ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ ಎಂದರು.
ತೀವ್ರ ಉಸಿರಾಟ ತೊಂದರೆ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳುನಾಡಿನಲ್ಲಿ 66, ಮಹಾರಾಷ್ಟ್ರಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ. ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು ಎಂದು ಅವರು ತಿಳಿಸಿದರು.
ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು. ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು ಎಂದು ಅವರು ಹೇಳಿದರು.
ಈಗಾಗಲೇ ಕೇಂದ್ರ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಲು ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಇರಬಾರದು. ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ, ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು ಎಂದು ಸಿದ್ದರಾಮಯ್ಯ ನಿರ್ದೇಶನ ನೀಡಿದರು.
ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣ ಮುನ್ನೆಚ್ಚರಿಕೆಯಾಗಿ ವ್ಯಾಕ್ಸಿನ್ಗಳನ್ನು ಸಿದ್ದವಾಗಿಟ್ಟು ಕೊಳ್ಳಬೇಕು. ಸಾಮಾಜಿಕ ಮಾಧ್ಯಮಗಳಲ್ಲಿ ಮೂಲಕ ಕಾಲಕಾಲಕ್ಕೆ ಸಾರ್ವಜನಿಕರಿಗೆ ಮಾಹಿತಿಯನ್ನು ನೀಡಬೇಕು ಎಂದು ಅವರು ಸೂಚನೆ ನೀಡಿದರು.
ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಸೇರಿದಂತೆ ಮತ್ತಿತರರು ಇದ್ದರು.
ಶೀತ, ನೆಗಡಿ ಇರುವ ಮಕ್ಕಳಿಗೆ ರಜೆ ನೀಡುವಂತೆ ಸೂಚನೆ: ‘ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು. ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಬಾರದು. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು. ಇಂತಹ ಮಕ್ಕಳಿಗೆ ರಜೆ ನೀಡಬೇಕು’
-ಸಿದ್ದರಾಮಯ್ಯ, ಮುಖ್ಯಮಂತ್ರಿ







