ʼಸಂಪುಟ ಪುನರ್ ರಚನೆʼ | ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಚಿವ ಸಂಪುಟ ಪುನರ್ ರಚನೆ ಸಂಬಂಧ ಹೊಸದಿಲ್ಲಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸೋಮವಾರ ಮಹತ್ವದ ಸಮಾಲೋಚನೆ ನಡೆಸಿದ್ದಾರೆ.
ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ದಿಲ್ಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ, ಸಂಪುಟ ಪುನರ್ ರಚನೆ ವಿಚಾರ ಪ್ರಸ್ತಾಪಿಸಿದ್ದರು. ‘ಈ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚಿಸಿ’ ಎಂದು ಸೂಚನೆ ನೀಡಿದ್ದರು.
ಆ ಹಿನ್ನೆಲೆಯಲ್ಲಿ ಹೊಸದಿಲ್ಲಿಯಲ್ಲಿನ ಖರ್ಗೆ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ‘ಸಂಪುಟಕ್ಕೆ ಯಾರನ್ನು ಸೇರ್ಪಡೆ ಮಾಡಿಕೊಳ್ಳಬೇಕು, ಯಾರನ್ನು ಸಂಪುಟದಿಂದ ಕೈಬಿಡಬೇಕು’ ಎಂಬುದು ಸೇರಿದಂತೆ ಸಂಪುಟ ಪುನರ್ ರಚನೆ ಸಂಬಂಧ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
‘ನ.20ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 2 ವರ್ಷ ತುಂಬಲಿದೆ. ನಮ್ಮ ಪಕ್ಷದಿಂದ ಆಯ್ಕೆಯಾಗಿರುವ 140ಮಂದಿ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಿದ್ದು, ಎಲ್ಲರೂ ಸಮರ್ಥರಿದ್ದಾರೆ. ಈ ಸಂಬಂಧ ಖರ್ಗೆಯವರನ್ನು ಭೇಟಿ ಮಾಡಲಿದ್ದು, ಅವರು ಎಷ್ಟು ಬದಲಾವಣೆ ಮಾಡಲು ಸೂಚಿಸುತ್ತಾರೋ ಅಷ್ಟು ಬದಲಾವಣೆ ಮಾಡಲಾಗುವುದು’ ಎಂದು ಸಿದ್ದರಾಮಯ್ಯ, ಖರ್ಗೆ ಭೇಟಿಗೂ ಮೊದಲೇ ಪ್ರತಿಕ್ರಿಯೆ ನೀಡಿದರು.
‘ನಾಯಕತ್ವ ಬದಲಾವಣೆ’ ವಿಚಾರವಾಗಿ ಹೈಕಮಾಂಡ್ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಬದಲಾಗಿ ಸಂಪುಟ ಪುನಾರಚನೆಗೆ ಒತ್ತು ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಾಯಕತ್ವ ಅಭಾದಿತ ಎಂಬ ಅಭಿಪ್ರಾಯ ಸಿದ್ದರಾಮಯ್ಯರ ಆಪ್ತ ಬಳಗದ ಅನಿಸಿಕೆಯಾಗಿದೆ. ಸಂಪುಟ ಪುನರ್ ರಚನೆ ಮಾಡಿದರೆ 10ರಿಂದ 12 ಮಂದಿ ಸಚಿವರನ್ನು ಕೈಬಿಟ್ಟು ಆ ಸ್ಥಾನಗಳಿಗೆ ಹೊಸಬರನ್ನು ನೇಮಕ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ಈ ಮಧ್ಯೆ ಡಿಸೆಂಬರ್ 8ರಿಂದ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಕಲಾಪವು ಆರಂಭವಾಗಲಿದ್ದು, ಅಧೀಶನಕ್ಕೆ ಸಚಿವರು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಆದರೆ, ಸಂಪುಟ ಪುನಾರಚನೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೆಲ ಸಚಿವರು ಗೊಂದಲಕ್ಕೆ ಸಿಲುಕಿದ್ದಾರೆ. ಅಧಿವೇಶನಕ್ಕೂ ಮೊದಲೇ ಸಂಪುಟ ಪುನಾರಚನೆಯೋ ಅಥವಾ ನಂತರವೋ ಎಂಬುದು ಕುತೂಹಲ ಸೃಷ್ಟಿಸಿದೆ.







