ರಾಜ್ಯದ ಅನೇಕ ಜಿಲ್ಲೆಗಳಲ್ಲಿ ‘ಚಳಿ ಹೆಚ್ಚಳ’: ಹವಾಮಾನ ಇಲಾಖೆ ಮುನ್ಸೂಚನೆ

ಸಾಂದರ್ಭಿಕ ಚಿತ್ರ (PTI)
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುತ್ತಿದ್ದು, ಮುಂದಿನ 2 ದಿನಗಳ ವರೆಗೆ ವಿವಿಧ ಭಾಗಗಳಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಕನಿಷ್ಠ ತಾಪಮಾನ 17.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಎಚ್ಎಎಲ್ ವಿಮಾನ ನಿಲ್ದಾಣದ ವೀಕ್ಷಣಾಲಯದಲ್ಲಿ ಕ್ರಮವಾಗಿ 1 ಡಿಗ್ರಿ ಸೆಲ್ಸಿಯಸ್ ಮತ್ತು 0.7 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಿ 16.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಳಗಾವಿ ವಿಮಾನ ನಿಲ್ದಾಣದ ವೀಕ್ಷಣಾಲಯದಲ್ಲಿ ಕನಿಷ್ಠ 11.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಸಾಮಾನ್ಯಕ್ಕಿಂತ 4.8 ಡಿಗ್ರಿ ಸೆಲ್ಸಿಯಸ್ ಕುಸಿತವಾಗಿದೆ. ವಿಜಯಪುರ ಮತ್ತು ಧಾರವಾಡದಲ್ಲಿ ಕ್ರಮವಾಗಿ 12.4 ಮತ್ತು 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮೈಸೂರು ಮತ್ತು ಶಿವಮೊಗ್ಗದಲ್ಲಿ ಕ್ರಮವಾಗಿ 17.8 ಮತ್ತು 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ರಾಜ್ಯದ ಹೆಚ್ಚಿನ ಭಾಗಗಳಿಗೆ, ವಿಶೇಷವಾಗಿ ಉತ್ತರ ಒಳನಾಡಿನಲ್ಲಿ ತೀವ್ರ ಚಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಮುಂದಿನ 24 ಗಂಟೆಗಳ ಕಾಲ ಬೆಂಗಳೂರಿನಲ್ಲಿ, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಕವಿದ ವಾತಾವರಣದೊಂದಿಗೆ ಮುಂದಿನ ಎರಡು ದಿನಗಳ ವರೆಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.





