ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ದೂರು ದಾಖಲು; ಕಾರಣವೇನು?

ಬೆಂಗಳೂರು : ‘ಉಮರ್ ಖಾಲಿದ್ ರಾಷ್ಟ್ರೀಯವಾದಿ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿಕೆ ನೀಡಿದ್ದು, ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸಂಘಪರಿವಾರದ ತೇಜಸ್ ಗೌಡ ಎಂಬವರು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.
ದಿಲ್ಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ಉಮರ್ ಖಾಲಿದ್ ರಾಷ್ಟ್ರೀಯವಾದಿ. ಆತನ ಬಗ್ಗೆ ಮಾತನಾಡಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ಗೆ(ಎಬಿವಿಪಿ) ಯಾವುದೇ ಹಕ್ಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದರು. ಇದು ಸಮಾಜದಲ್ಲಿ ದ್ವೇಷಭಾವನೆ ಮೂಡಿಸುತ್ತದೆ. ಹೀಗಾಗಿ ಪ್ರಕರಣವನ್ನು ದಾಖಲಿಸಬೇಕು ಎಂದು ದೂರುದಾರ ತೇಜಸ್ ಗೌಡ ಹೇಳಿದ್ದಾರೆ.
ಉಮರ್ ಖಾಲಿದ್ ಸಾಕ್ಷ್ಯ ಚಿತ್ರ ಪ್ರದರ್ಶನಕ್ಕೆ ಎಬಿವಿಪಿ ವಿರೋಧ: ಇನ್ನು ಉಮರ್ ಖಾಲಿದ್ ಕುರಿತಾಗಿ ಸಾಕ್ಷ್ಯಚಿತ್ರ ನಿರ್ಮಾಣವಾಗಿದ್ದು, ಇದನ್ನು ಬೆಂಗಳೂರಿನ ನಾಗರಬಾವಿಯಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಕಾನೂನು ಮತ್ತು ಸಮಾಜ ಸಮಿತಿಯೂ ಸೆಪ್ಟೆಂಬರ್ 14ರ ಸಂಜೆ 7ಗಂಟೆಗೆ ಪ್ರದರ್ಶನಕ್ಕೆ ಸಜ್ಜಾಗಿತ್ತು. ಆದರೆ, ಈ ಸಾಕ್ಷ್ಯ ಚಿತ್ರ ಪ್ರದರ್ಶನಕ್ಕೆ ಎಬಿವಿಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಷ್ಟೇ ಅಲ್ಲದೇ, ಸಾಕ್ಷ್ಯಚಿತ್ರ ಪ್ರದರ್ಶನ ರದ್ದತಿಗೆ ಕೇಂದ್ರ ಸಚಿವರ ಮಧ್ಯಪ್ರವೇಶಕ್ಕೆ ಒತ್ತಾಯಿಸಿತ್ತು. ವಿವಾದ ಬೆನ್ನಲ್ಲೇ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.






