ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಮುಖ್ಯಮಂತ್ರಿ ಯಾರು ಎಂದು ಸ್ಪಷ್ಟಪಡಿಸಬೇಕು: ಆರ್.ಅಶೋಕ್ ವ್ಯಂಗ್ಯ

ಆರ್.ಅಶೋಕ್
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದ ಆಡಳಿತ ಯಂತ್ರಾಂಗ ನಿಷ್ಕ್ರಿಯಗೊಂಡಿದ್ದು, ರಾಜ್ಯದ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಕಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ.
ಶನಿವಾರ ಪದ್ಮನಾಭನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಯಾರು ಎಂದು ಕೂಡಲೇ ಸ್ಪಷ್ಟಪಡಿಸಬೇಕು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಕಾದಾಟ ನಡೆಯುತ್ತಿರುವುದರಿಂದ ಸರಕಾರ ಸತ್ತುಹೋಗಿದೆ ಎಂದು ದೂರಿದರು.
‘ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಪದವಿಯಲ್ಲಿ ಕೂರಿಸಬೇಕು ಎಂದು ಅವರ ಪರ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ ಅಂತಿಮ ಹಂತಕ್ಕೆ ಬಂದಿದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ನೀಡಿಲ್ಲವೆಂದರೆ ಸರಕಾರ ನಡೆಯುವುದಿಲ್ಲ. ಅಧಿಕಾರಿಗಳು ಕೆಲಸ ಮಾಡುವುದಿಲ್ಲ’ ಎಂದು ಆರ್.ಅಶೋಕ್ ಹೇಳಿದರು.
‘ಸಾರ್ವಜನಿಕರು, ರೈತ ಸಮುದಾಯ, ವಿದ್ಯಾರ್ಥಿಗಳು ಎದುರಿಸುತ್ತಿರುವ ಹತ್ತಾರು ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಕಾಳಜಿ ಕಾಂಗ್ರೆಸ್ ಹೈಕಮಾಂಡ್ಗೆ ಇಲ್ಲ. ಸಿದ್ದರಾಮಯ್ಯನವರನ್ನು ಉಳಿಸಲು ಒಂದು ಬಣ, ಅವರನ್ನು ಕೆಳಗಿಳಿಸಲು ಮತ್ತೊಂದು ಬಣ ಕೆಲಸ ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕೆಂದು ಒಂದು ತಂಡ, ಆಗಬಾರದೆಂದು ಮತ್ತೊಂದು ತಂಡ, ತಂತ್ರ ಕುತಂತ್ರ ಮಾಡುತ್ತಿವೆ ಎಂದು ಟೀಕಿಸಿದರು.
ಈ ನಡುವೆ ಅಪರಾಧ ಕೃತ್ಯಗಳು ಹೆಚ್ಚಿವೆ. ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದು, ರಾಜಕೀಯ ಸ್ಥಿತಿ ಅಧೋಗತಿಗೆ ಹೋಗಿದೆ. ರಾಹುಲ್ ಗಾಂಧಿ ನಾಯಕತ್ವ ಬಲಹೀನವಾಗಿದ್ದು, ರಾಜ್ಯದಲ್ಲಿಯೂ ಕಾಂಗ್ರೆಸ್ ನಾಯಕತ್ವ ಇಲ್ಲವಾಗಿದೆ. ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರು ಜೈಲಲ್ಲಿದ್ದಾರೆ. ಅವರ ಮತಗಳನ್ನು ಕೇಳಲು ಡಿಕೆಶಿ ಜೈಲಿಗೆ ಹೋಗಿದ್ದಾರೆ. ಕಾಂಗ್ರೆಸ್ಗೆ ಇಂತಹ ಸ್ಥಿತಿ ಬಂದಿರುವುದು ಶೋಚನೀಯ ಎಂದು ವಾಗ್ದಾಳಿ ನಡೆಸಿದರು.







