ಹೊಸ 21 ತಾಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ : ಎಚ್.ಕೆ.ಪಾಟೀಲ್

ಎಚ್.ಕೆ.ಪಾಟೀಲ್
ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ ರಚನೆಯಾದ 21 ತಾಲೂಕುಗಳಲ್ಲಿ ತಲಾ 8.60 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಪ್ರಜಾಸೌಧಗಳನ್ನು ನಿರ್ಮಾಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚೇಳೂರು, ಮಂಚೇನಹಳ್ಳಿ, ನ್ಯಾಮತಿ, ಹನೂರು, ಅಜ್ಜಂಪುರ, ಉಳ್ಳಾಲ, ಸಾಲಿಗ್ರಾಮ, ಅರಕೇರಾ, ಮೂಡಲಗಿ, ಯರಗಟ್ಟಿ, ನಿಪ್ಪಾಣಿ, ಗುಳೇದಗುಡ್ಡ, ರಬಕವಿ-ಬನಹಟ್ಟಿ, ತೇರದಾಳ, ನಿಡಗುಂದಿ, ದೇವರ ಹಿಪ್ಪರಗಿ, ಚಡಚಣ, ಆಲಮೇಲ, ಅಣ್ಣಿಗೇರಿ, ಹುಬ್ಬಳ್ಳಿ ನಗರ, ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಹೊಸದಾಗಿ ತಾಲೂಕು ಪ್ರಜಾಸೌಧ ಕಟ್ಟಡಗಳನ್ನು ನಿರ್ಮಿಸಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬರ ಪೀಡಿತ ಪ್ರದೇಶಗಳಿಗೆ ಬೀರನಹಳ್ಳಿ ಗ್ರಾಮದ ಹತ್ತಿರ ಏತ ನೀರಾವರಿ ಯೋಜನೆಯನ್ನು ನೀರಾವರಿ ಸೌಲಭ್ಯ ಕಲ್ಪಿಸಲು 89.30 ಕೋಟಿ ರೂ. ಹಾಗೂ ರಾಯಚೂರು ನಗರದಲ್ಲಿ ಸುಸಜ್ಜಿತವಾದ ಜಿಲ್ಲಾ ಕನ್ವೆಂಷನ್ ಸೆಂಟರ್ ನಿರ್ಮಾಣ ಕಾಮಗಾರಿಯನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮ್ಯಾಕ್ರೋ ಯೋಜನೆಯಡಿ 40 ಕೋಟಿ ರೂ.ಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
2025-26ನೇ ಸಾಲಿಗೆ ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಬಾರ್ಡ್ ಮೂಲಕ ಪುನರ್ಧನಕ್ಕೆ ಪಡೆಯುವ 1600 ಕೋಟಿ ರೂ.ಗಳಿಗೆ ರಾಜ್ಯ ಸರಕಾರದ ಖಾತರಿ ನೀಡಲು ನಿರ್ಧರಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕು ಆಸ್ಪತ್ರೆಯ ಬದಲಾಗಿ, ಸಿಂಧನೂರು ತಾಲೂಕು ಆಸ್ಪತ್ರೆಯನ್ನು 100 ಹಾಸಿಗೆಗಳಿಂದ 200 ಹಾಸಿಗೆಗಳಿಗೆ ಜಿಲ್ಲಾ ಮಟ್ಟದ ಆಸ್ಪತ್ರೆಯಾಗಿ 28.75 ಕೋಟಿ ರೂ.ಗಳ ಮೊತ್ತದಲ್ಲಿ ಮೇಲ್ದರ್ಜೆಗೇರಿಸಲು ಆಡಳಿತಾತ್ಮಕ ಅನುಮೋದನೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.
ಮುಡಾ ಕಾಯ್ದೆ ಜಾರಿಗೆ: ಮೈಸೂರು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 2024 ಹಾಗೂ ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ ಅಧಿನಿಯಮ 2024 ಮೇ 23ರಿಂದ ಜಾರಿಗೆ ಬರಲಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.







