‘ವಿಧಾನಪರಿಷತ್ ಚುನಾವಣೆ’: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಮತದಾನದ ಕುರಿತು ಮಾಹಿತಿ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂ.18ರಂದು ನಡೆಯಲಿರುವ ಚುನಾವಣೆಯಲ್ಲಿ ಯಾವ ರೀತಿ ಮತದಾನ ಮಾಡಬೇಕು ಎಂದು ಕಾಂಗ್ರೆಸ್ ಶಾಸಕರಿಗೆ ಮತಪತ್ರದ ಪ್ರತಿಯನ್ನು ಪ್ರದರ್ಶಿಸಿ ತರಬೇತಿ ನೀಡಲಾಯಿತು.
ಮಂಗಳವಾರ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿಯಲ್ಲಿರುವ ಖಾಸಗಿ ರೆಸಾರ್ಟ್‍ನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು.
ಬಹುತೇಕ ಹೊಸ ಸದಸ್ಯರು ಈ ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಹೀಗಾಗಿ ಪ್ರಾಶಸ್ತ್ಯ ಮತಗಳನ್ನು ಚಲಾವಣೆ ಮಾಡಬೇಕಿರುವ ಹಿನ್ನೆಲೆಯಲ್ಲಿ ಶಾಸಕರಿಗೆ, ಮೊದಲ ಪ್ರಾಶಸ್ತ್ಯ ಹಾಗೂ ದ್ವಿತೀಯ ಪ್ರಾಶಸ್ತ್ಯ ಮತವನ್ನು ಯಾವ ರೀತಿ ಚಲಾಯಿಸಬೇಕು ಎಂದು ಮಾಹಿತಿ ನೀಡಲಾಯಿತು.
ವಿಧಾನಸಭೆಯಲ್ಲಿ ಕಾಂಗ್ರೆಸ್ 133, ಸ್ಪೀಕರ್, ಪಕ್ಷೇತರರು ಮೂವರು ಸೇರಿ ಒಟ್ಟು 137 ಸಂಖ್ಯಾಬಲವನ್ನು ಹೊಂದಿದೆ. ಕಾಂಗ್ರೆಸ್ ಪಕ್ಷದಿಂದ ಐವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಒಬ್ಬ ಅಭ್ಯರ್ಥಿ ಗೆಲ್ಲಲು 28 ಮತಗಳ ಅಗತ್ಯವಿದೆ. ಅದರಂತೆ, ಮೊದಲ ಇಬ್ಬರು ಅಭ್ಯರ್ಥಿಗಳಿಗೆ ತಲಾ 29 ಮೊದಲ ಪ್ರಾಶಸ್ತ್ಯದ ಮತಗಳನ್ನು ಹಾಕಿಸಿ, ಉಳಿದ ಇಬ್ಬರು ಅಭ್ಯರ್ಥಿಗಳಿಗೆ 28 ಮೊದಲ ಪ್ರಾಶಸ್ತ್ಯದ ಮತಗಳನ್ನು ಹಾಕಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನುಳಿದಂತೆ ಐದನೆ ಅಭ್ಯರ್ಥಿಗೆ 23 ಮೊದಲ ಪ್ರಾಶಸ್ತ್ಯದ ಮತಗಳು ಲಭ್ಯವಾಗಲಿದೆ. ಇನ್ನುಳಿದ 5 ಮತಗಳಿಗಾಗಿ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ಮತಗಳು ಕಾಂಗ್ರೆಸ್ ಅಭ್ಯರ್ಥಿ ಪರ ಚಲಾವಣೆಗೊಳ್ಳಬಹುದು ಎಂಬ ನಿರೀಕ್ಷೆಯಿದೆ. ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತಗಳ ನಿಗದಿತ ಕೋಟಾ ಲಭ್ಯವಾಗದೆ ಇದ್ದಲ್ಲಿ, ದ್ವಿತೀಯ ಪ್ರಾಶಸ್ತ್ಯದ ಮತಗಳನ್ನು ಪರಿಗಣಿಸಲಾಗುತ್ತದೆ.
ಆಗ ಅತೀ ಕಡಿಮೆ ಮತಗಳನ್ನು ಪಡೆದ ಅಭ್ಯರ್ಥಿಯನ್ನು ರದ್ದುಗೊಳಿಸಿ, ದ್ವಿತೀಯ ಪ್ರಾಶಸ್ತ್ಯದ ಮತಗಳನ್ನು ಪರಿಗಣನೆಗೆ ತೆಗೆದುಕೊಂಡು ಮತಗಳಿಕೆಯಲ್ಲಿ ಮುಂದಿರುವ ಅಭ್ಯರ್ಥಿಗೆ ಹಂಚಲಾಗುತ್ತದೆ. ಕಾಂಗ್ರೆಸ್ ತನ್ನ ಐದನೆ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಇನ್ನುಳಿದ ಮೂರು ಮತಗಳಿಗಾಗಿ ಯಾವ ರೀತಿ ರಣತಂತ್ರ ರೂಪಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್, ಎಐಸಿಸಿ ಕಾರ್ಯದರ್ಶಿಗಳಾದ ಅಭಿಷೇಕ್ ದತ್, ಗೋಪಿನಾಥ್ ಪಳನಿಸ್ವಾಮಿ, ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಉಪಸ್ಥಿತರಿದ್ದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಬಿ.ಕೆ.ಹರಿಪ್ರಸಾದ್, ಬಿ.ಎಸ್.ಶಿವಣ್ಣ, ತಿಪ್ಪಣ್ಣಪ್ಪ ಕಮಕನೂರ್, ಪಿ.ವಿ.ಮೋಹನ್ ಹಾಗೂ ವಿನಯ್ ಕಾರ್ತಿಕ್ ಪ್ರಕಾಶ್ ಅವರನ್ನು ಕಣಕ್ಕಿಳಿಸಲಾಗಿದೆ.






