ನಾಳೆ(ಅ.27) ಶಿಕ್ಷಕರ-ಪದವೀಧರರ ಕ್ಷೇತ್ರಗಳ ಮತ ಎಣಿಕೆ; ಸಂಜೆಯ ವೇಳೆ ಫಲಿತಾಂಶ ಪ್ರಕಟ ಸಾಧ್ಯತೆ

ಸಾಂದರ್ಭಿಕ ಚಿತ್ರ | PC : Image by pch.vector on Magnific
ಬೆಂಗಳೂರು : ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ನಡುವೆ ಪೈಪೋಟಿಗೆ ಕಾರಣವಾಗಿದ್ದ ವಿಧಾನ ಪರಿಷತ್ತಿನ ಬೆಂಗಳೂರು ಹಾಗೂ ಈಶಾನ್ಯ ಶಿಕ್ಷಕರ, ಪಶ್ಚಿಮ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ನಾಳೆ(ಅ.27) ನಡೆಯಲಿದ್ದು, ಸಂಜೆಯ ವೇಳೆಗೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಗಳಿವೆ.
ಮೇಲ್ಕಂಡ ನಾಲ್ಕು ಕ್ಷೇತ್ರ್ರಗಳಲ್ಲಿ ಪಕ್ಷೇತರರು ಸೇರಿದಂತೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಒಟ್ಟು 43 ಅಭ್ಯರ್ಥಿಗಳು ಕಣದಲ್ಲಿದ್ದು, ಶಿಕ್ಷಕರು ಹಾಗೂ ಪದವೀಧರ ಮತದಾರರು ಅಭ್ಯರ್ಥಿಗಳ ಭವಿಷ್ಯವನ್ನು ಮತಪತ್ರದಲ್ಲಿ ಬರೆದಿದ್ದು, ನಾಳಿನ ಮತ ಎಣಿಕೆ ಪ್ರಕ್ರಿಯೆಯಲ್ಲಿ ಘಟಾನುಘಟಿ ಅಭ್ಯರ್ಥಿಗಳ ಹಣೆಬರಹ ಬಹಿರಂಗವಾಗಲಿದೆ.
ಬಿಜೆಪಿ ಮತ್ತು ಜೆಡಿಎಸ್ ಹಾಗೂ ಆಡಳಿತಾರೂಢ ಕಾಂಗ್ರೆಸ್ ನಡುವಿನ ಪ್ರತಿಷ್ಠೆಯ ಕಣವಾಗಿದ್ದ ಈ ಚುನಾಣೆಯಲ್ಲಿ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಅಭ್ಯರ್ಥಿಗಳ ಸೋಲು-ಗೆಲುವಿನ ಲೆಕ್ಕಾಚಾರ ಮೂರು ದಿನಗಳಿಂದ ನಡೆಯುತ್ತಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರ ಸೇರಿದಂತೆ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಿದೆ. ಜೆಡಿಎಸ್ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರೆ, ಉಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಈ ಚುನಾವಣೆಯಲ್ಲಿ ಪ್ರಾಶಸ್ತ್ಯದ ಮತದಾನವಾಗಿರುವುದರಿಂದ ಮತ ಎಣಿಕೆ ವಿಳಂಬವಾಗಲಿದ್ದು, ಅ. 27ರ ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಪ್ರಕ್ರಿಯೆ ಆರಂಭವಾದರೂ ಸಂಜೆ ವೇಳೆಗೆ ಚುನಾವಣಾ ಫಲಿತಾಂಶವನ್ನು ನಿರೀಕ್ಷಿಸಬಹುದಾಗಿದೆ. ಬೆಂಗಳೂರು ಶಿಕ್ಷಕರ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಗಳ ಮತ ಎಣಿಕೆಯು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿಕ ಸರಕಾರಿ ಕಲಾ ಕಾಲೇಜಿನಲ್ಲಿ ನಡೆಯಲಿದೆ. ಹೀಗಾಗಿ ಕಾಲೇಜಿಗೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಶೇ.81.98, ಈಶಾನ್ಯ ಶಿಕ್ಷಕರ-ಶೇ.86.97, ಪಶ್ಚಿಮ ಪದವೀಧರ-ಶೇ.75.62 ಹಾಗೂ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಶೇ.73.58ರಷ್ಟು ಮತದಾನವಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಪುಟ್ಟಣ್ಣ, ಜೆಡಿಎಸ್ನ ಎ.ಪಿ.ರಂಗನಾಥ ಸೇರಿದಂತೆ ಒಟ್ಟು ಆರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಅತ್ತ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಶರಣಪ್ಪ ಮಟ್ಟೂರು, ಬಿಜೆಪಿಯಿಂದ ಶಶೀಲ್ ನಮೋಶಿ ಸೇರಿ 13 ಅಭ್ಯರ್ಥಿಗಳು, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಶಶಿ ಹುಲಿಕುಂಟೆಮಠ್, ಬಿಜೆಪಿಯ ಕೆ.ಎಂ.ಸುರೇಶ್ ಸೇರಿ 10 ಮಂದಿ ಅಭ್ಯರ್ಥಿಗಳು ಹಾಗೂ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಮೋಹನ ಲಿಂಬಿಕಾಯಿ, ಬಿಜೆಪಿಯಿಂದ ಸಂಕನೂರ ಸೇರಿ 14 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಮುನ್ನಚ್ಚರಿಕೆ ಕ್ರಮವಾಗಿ ಮತ ಎಣಿಕೆ ಕೇಂದ್ರಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ. ಅಲ್ಲದೆ, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಅ.31ಕ್ಕೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದ್ದು, ಮಾದರಿ ನೀತಿ ಸಂಹಿತೆಯು ಅಂದೇ ಅಂತ್ಯಗೊಳ್ಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.






