ಮಳೆಯಿಂದ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ : ಡಿಸಿಎಂ ಡಿ.ಕೆ.ಶಿವಕುಮಾರ್

ಡಿ.ಕೆ. ಶಿವಕುಮಾರ್
ಬೆಂಗಳೂರು: ಪ್ರತಿವರ್ಷ ಮಳೆಯಿಂದ ನಗರದಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಹೀಗಾಗಿ ಮಳೆಯಿಂದ ಆಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಮಳೆಯಿಂದಾಗುವ ಸಮಸ್ಯೆಗೆ ಪರಿಹಾರ ನೀಡುವ ಕೆಲಸವಾಗಿಲ್ಲ. ಆದರೂ ಬಿಜೆಪಿ ಪಕ್ಷದವರು ಟೀಕೆ ಮಾಡಲಿ, ನಾವು ನಮ್ಮ ಕೆಲಸ ಮಾಡುತ್ತೇವೆ. ಅಂತಿಮವಾಗಿ ಟೀಕೆಗಳು ಸಾಯುತ್ತವೆ ಕೆಲಸಗಳು ಮಾತ್ರ ಉಳಿಯುತ್ತವೆ ಎಂದರು.
ನಗರದಲ್ಲಿ ಮಳೆಯಿಂದಾಗಿರುವ ತೊಂದರೆ ಬಗ್ಗೆ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಒತ್ತುವರಿ ವಿಚಾರದಲ್ಲಿ ಅವರ ಕಾಲದಲ್ಲಿ ಏನು ಕೆಲಸ ಮಾಡುತ್ತಿದ್ದರು. ಒತ್ತುವರಿ ಮಾಡಿಕೊಂಡವರು ನ್ಯಾಯಾಲಯಗಳಿಂದ ತಡೆಯಾಜ್ಞೆ ತಂದಿದ್ದಾರೆ. ಆದರೂ ನಾನು ಒತ್ತುವರಿಗಳನ್ನು ತೆರವುಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದರು.
ಮೊದಲು ಮಳೆನೀರಿನಿಂದ ತೊಂದರೆಗೆ ಒಳಗಾಗುತ್ತಿದ್ದ 211 ಪ್ರದೇಶಗಳನ್ನು ಗುರುತಿಸಿತ್ತು. ಈಗ 166 ಪ್ರದೇಶಗಳಲ್ಲಿ ಸಮಸ್ಯೆಯಾಗಿದೆ. 44 ಕೆಲಸ ಬಾಕಿಯಿದ್ದು, ಇದರಲ್ಲಿ 24 ಕಡೆ ಕಾರ್ಯಪ್ರಗತಿಯಲ್ಲಿದೆ. ಮೊದಲಿಗಿಂತ ಈಗ ಸಮಸ್ಯೆಗಳನ್ನು ಎದುರಿಸುತ್ತಿರುವ ಪ್ರದೇಶಗಳ ಪ್ರಮಾಣ ಕಡಿಮೆಯಾಗಿದೆ. ಬೆಂಗಳೂರು ನಾಗರೀಕರ ರಕ್ಷಣೆ ಮಾಡಲಾಗುತ್ತಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿಗಳು ಹಾಗೂ ನಗರ ಯೋಜನಾ ಪ್ರಾಧಿಕಾರದ ಅಧಿಕಾರಿಗಳ ಜತೆ ಚರ್ಚೆ ಮಾಡಿ ಮುಂದಿನ ದಿನಗಳಲ್ಲಿ ತಳಮಟ್ಟದ ಪ್ರದೇಶಗಳಲ್ಲಿ ಬೆಸ್ಮೆಂಟ್ ಪಾರ್ಕಿಂಗ್ ವ್ಯವಸ್ಥೆಗೆ ಅವಕಾಶ ನೀಡದಿರಲು ನೀತಿ ರೂಪಿಸಲಾಗುವುದು. ಬೆಸ್ಮೆಂಟ್ ನಿಂದ ನೀರನ್ನು ಪಂಪ್ ಮೂಲಕ ಹೊರಗೆ ಹಾಕುವಾಗ ದುರ್ಘಟನೆ ನಡೆದು ಜೀವಹಾನಿಯಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಂಗಳೂರಿಗೆ ಸಂಬಂಧಿಸಿದಂತೆ ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆಯಿಂದಾಗಿ ಹೆಚ್ಚು ಸಮಸ್ಯೆ ಎದುರಾಗಿದೆ. ಅವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಇದು ಸಾಕ್ಷಿ. ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ.
-ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ







