ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಪಟ್ಟು; ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್‌ನಿಂದ ಅಹೋರಾತ್ರಿ ಧರಣಿ

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಲಂಚ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಪಟ್ಟು ಹಿಡಿದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.
ಮಂಗಳವಾರ ವಿಧಾನಸಭೆಯಲ್ಲಿ ನಡುವೆ ನಿಯಮ 69 ರಡಿ ನಡೆದ ಚರ್ಚೆಗೆ ಉತ್ತರ ನೀಡಿದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ರಾಜೀನಾಮೆ ನೀಡಲು ನಾನೇನು ತಪ್ಪು ಮಾಡಿದ್ದೇನೆ, ರಾಜೀನಾಮೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ವಿಪಕ್ಷಗಳ ಸದಸ್ಯರ ಬೇಡಿಕೆಯನ್ನು ನಿರಾಕರಿಸಿದರು.
ಇದರಿಂದ ಕೆರಳಿದ ವಿಪಕ್ಷ ನಾಯಕ ಆರ್. ಅಶೋಕ್, ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಕಮಿಷನ್ ದಂಧೆಯ ನಡೆಯುತ್ತಿದೆ. ಈ ಸರಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ-ಮರ್ಯಾದೆ ಇದ್ದರೆ ಈ ಕೂಡಲೇ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.
ಈ ಮಧ್ಯೆ ಸದನದ ಕಾರ್ಯ ಕಲಾಪ ಪೂರ್ಣಗೊಳಿಸಿದ ಸ್ಪೀಕರ್ ಯು.ಟಿ.ಖಾದರ್ ಅವರು ಸದನವನ್ನು ನಾಳೆ (ಫೆ.4)ಗೆ ಮುಂದೂಡಿದರು. ಕೂಡಲೇ ಸ್ಪೀಕರ್ ಪೀಠದ ಮುಂದಿನ ಬಾವಿಗಿಳಿದು ಧರಣಿ ಆರಂಭಿಸಿದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿ ನಡೆಸಿದರು.
ರಾಜ್ಯ ಸರಕಾರ, ಅಬಕಾರಿ ಸಚಿವ ತಿಮ್ಮಾಪುರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ದ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಸಚಿವ ತಿಮ್ಮಾಪುರ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ವಿಪಕ್ಷ ನಾಯಕ ಆರ್. ಅಶೋಕ್, ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಹಿರಿಯ ಸದಸ್ಯರಾದ ಆರಗ ಜ್ಞಾನೇಂದ್ರ, ಸುರೇಶ್ ಕುಮಾರ್, ಜೆಡಿಎಸ್ ನ ಸುರೇಶ್ ಬಾಬು ಸೇರಿದಂತೆ ಇನ್ನಿತರರು ಸಾಥ್ ನೀಡಿದರು.







