ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆ | ಗೃಹಲಕ್ಷ್ಮಿ ಯೋಜನೆ ನಿಲ್ಲದು, ಗರ್ಭಿಣಿ-ಬಾಣಂತಿಯರಿಗೆ ಮತ್ತೆ ಬಿಸಿಯೂಟ..!

ಸಾಂದರ್ಭಿಕ ಚಿತ್ರ | PC : Gemini AI
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರೆಂಟಿಗಳ ಪೈಕಿ ಗೃಹಲಕ್ಷ್ಮೀ ಯೋಜನೆ ಪ್ರಮುಖವಾಗಿದ್ದು, ಈ ಯೋಜನೆಯಡಿ ಇಲ್ಲಿಯವರೆಗೂ ಎಲ್ಲ ಅರ್ಹ ಫಲಾನುಭವಿಗಳಿಗೆ ಒಟ್ಟು 62,345ಕೋಟಿ ರೂ.ಗಳ ವೆಚ್ಚ ಭರಿಸಲಾಗಿದೆ. ಈ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಯಶಸ್ವಿಯಾಗಿ ಧನಸಹಾಯ ಪಾವತಿಸಲಾಗಿದ್ದು, ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 28,608 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.
ಮಹಿಳೆಯರು ಹಾಗೂ ಮಕ್ಕಳಿಗೆ ಸಂಕಷ್ಟದ ಸಂದರ್ಭದಲ್ಲಿ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ‘ಅಕ್ಕಪಡೆ ಯೋಜನೆ’ಯನ್ನು ಗೃಹ ಇಲಾಖೆಯ ಸಹಯೋಗದೊಂದಿಗೆ ಪ್ರತಿಯೊಂದು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 1,39,844 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಹೆಚ್ಚುವರಿಯಾಗಿ ಒಂದು ಜೊತೆ ಸಮವಸ್ತ್ರವನ್ನು ವಿತರಿಸಲಾಗುವುದು ಎಂದು ಪ್ರಕಟಿಸಿದ್ದಾರೆ.
ಮಾಜಿ ದೇವದಾಸಿಯರ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು, ಪುನರ್ವಸತಿ ಕಲ್ಪಿಸಲು ಮತ್ತು ಸರಕಾರದ ಸೌಲಭ್ಯಗಳನ್ನು ಒದಗಿಸುವ ಹಿನ್ನೆಲೆಯಲ್ಲಿ ಅವರ ನಿಖರ ಮಾಹಿತಿ ಸಂಗ್ರಹಿಸುವುದಕ್ಕಾಗಿ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ. ಮಾಜಿ ದೇವದಾಸಿಯರ ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ವಿಸ್ತರಿಸುವುದರ ಜೊತೆಗೆ ಹೆಣ್ಣುಮಕ್ಕಳಿಗೆ ಸ್ವಯಂ ಉದ್ಯೋಗ ಹಾಗೂ ವೈಯಕ್ತಿಕ ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ಅಗತ್ಯ ಆರ್ಥಿಕ ಸಹಾಯ ನೀಡುವ ಕಾರ್ಯಕ್ರಮವನ್ನು ರೂಪಿಸಿ ಜಾರಿಗೊಳಿಸಲು 5 ಕೋಟಿ ರೂ. ಮೀಸಲಿಡಲಾಗಿದೆ ಎಂದು ತಿಳಿಸಿದರು.
ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು, ಚೇತನ ಹಾಗೂ ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ಆದಾಯೋತ್ಪನ್ನ ಚಟುವಟಿಕೆಗಳಿಗಾಗಿ ಪ್ರಸಕ್ತ ನೀಡಲಾಗುತ್ತಿರುವ 30 ಸಾವಿರ ರೂ.ಗಳ ಪ್ರೋ ತ್ಸಾಹಧನವನ್ನು 45ಸಾವಿರ ರೂ.ಗಳಿಗೆ ಹೆಚ್ಚಳ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಾಥಮಿಕ ಬಾಲ್ಯ ಆರೈಕೆ ಮತ್ತು ಶಿಕ್ಷಣವನ್ನು ಬಲಪಡಿಸಲು ಈ ಭಾಗದ ಜಿಲ್ಲೆಗಳಲ್ಲಿ ಲಭ್ಯವಿರುವ 1,668 ನಿವೇಶನಗಳಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣವನ್ನು 200ಕೋಟಿ ರೂ.ಗಳ ವೆಚ್ಚದಲ್ಲಿ ಕೆಕೆಆರ್ಡಿಬಿ ಅನುದಾನದಿಂದ ಕೈಗೊಳ್ಳಲಾಗುವುದು ಎಂದೂ ಉಲ್ಲೇಖಿಸಿದರು.
2026–27ನೆ ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿಯಾಗಿ 20 ಹೊಸ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶದಿಂದ 1 ಕೋಟಿ ರೂ. ಅನುದಾನ. ಅಂಗನವಾಡಿ ಕೇಂದ್ರಗಳ ಸಮಗ್ರ ಸುಧಾರಣೆಗೆ ಉನ್ನತ ಮಟ್ಟದ ಸಮಿತಿ ರಚನೆ ಸೇರಿದಂತೆ 2026-27ನೆ ಸಾಲಿನಲ್ಲಿ ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 63,135 ಕೋಟಿ ರೂ. ಮತ್ತು ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 94,663 ಕೋಟಿ ರೂ. ಒದಗಿಸಲಾಗಿದೆ ಎಂದು ಸಿಎಂ ಹೇಳಿದರು.
ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರ: ಮಾದಕ ವ್ಯಸನಕ್ಕೆ ಒಳಗಾದ 18 ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಯೋಗಿಕವಾಗಿ ಬೆಂಗಳೂರಿನ ನಿಮ್ಹಾನ್ಸ್ ಹಾಗೂ ಧಾರವಾಡದ ಡಿಮ್ಹಾನ್ಸ್ ಸಂಸ್ಥೆಗಳ ಸಹಯೋಗದೊಂದಿಗೆ ‘ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರ’ಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ.
ಗರ್ಭಿಣಿ, ಬಾಣಂತಿಯರಿಗೆ ಮತ್ತೆ ಬಿಸಿಯೂಟ: ನಮ್ಮ ಸರಕಾರದ ಹಿಂದಿನ ಅವಧಿಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈ ಯೋಜನೆಯು ಅವರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆ ತಡೆಗಟ್ಟಲು ಸಹಕಾರಿಯಾಗಿತ್ತು. ತದನಂತರದಲ್ಲಿ, ಮಧ್ಯಾಹ್ನದ ಬಿಸಿಯೂಟದ ಬದಲಾಗಿ ಮನೆ ಬಾಗಿಲಿಗೆ ಪಡಿತರಕ್ಕೆ ಒತ್ತು ನೀಡಲಾಗಿ, ಯೋಜನೆಯ ಮೂಲ ಉದ್ದೇಶ ಹಳಿತಪ್ಪಿದಂತಾಗಿತ್ತು. ಇದನ್ನು ಮನಗಂಡು ಎಲ್ಲ ಫಲಾನುಭವಿಗಳಿಗೂ ಹಿಂದಿನಂತೆ ಅಂಗನವಾಡಿ ಕೇಂದ್ರಗಳಲ್ಲಿಯೇ ಪ್ರತಿದಿನ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆಯನ್ನು ಮರುಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಪ್ರಕಟಿಸಿದ್ದಾರೆ.







