ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಪುಟ್ಟಣ್ಣ ಗೆಲುವು ನಿಶ್ಚಿತ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬೆಂಗಳೂರು: ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಸೋಲುತ್ತೇವೆ ಎಂಬ ಭಯದಿಂದಲೆ ಮೈತ್ರಿ ಮಾಡಿಕೊಂಡಿವೆ. ಆದರೂ, ನಮ್ಮ ಪಕ್ಷದ ಅಭ್ಯರ್ಥಿ ಪುಟ್ಟಣ್ಣ ನೂರಕ್ಕೆ ನೂರು ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪುಟ್ಟಣ್ಣ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪುಟ್ಟಣ್ಣ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಈ ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟಿದ್ದರು. ಈ ಹಿಂದೆಯೂ ಅವರು ಬಿಜೆಪಿ, ಜೆಡಿಎಸ್ ಅನ್ನು ಸೋಲಿಸಿದ್ದಾರೆ ಎಂದರು.
ಸತತವಾಗಿ ನಾಲ್ಕು ಬಾರಿ ಶಿಕ್ಷಕರ ಕ್ಷೇತ್ರದಿಂದ ಗೆಲ್ಲಬೇಕೆಂದರೆ ಶಿಕ್ಷಕರ ಬೆಂಬಲವನ್ನು ಪಡೆದಿದ್ದಾರೆ. ಅವರ ಮನಸ್ಸನ್ನು ಗೆದ್ದಿದ್ದಾರೆ. ಹಾಗಾಗಿ ಪುಟ್ಟಣ್ಣ ಅವರನ್ನು ಶಿಕ್ಷಕರು ಒಪ್ಪಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಶಿಕ್ಷಕರ ಬದುಕಿನ ಬಗ್ಗೆ ನಮ್ಮ ಸರಕಾರ ಕಾಳಜಿ ವಹಿಸಲಿದೆ. ಚುನಾವಣೆಗೂ ಮುನ್ನ ನಾವು ಶಿಕ್ಷಕರಿಗೆ ನಮ್ಮ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಗಳನ್ನು ಈಡೇರಿಸುತ್ತೇವೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಈ ಬಗ್ಗೆ ಈಗ ಮಾತನಾಡುವುದಿಲ್ಲ ಎಂದರು.
ಒಪಿಎಸ್ ಸೇರಿದಂತೆ ಅನೇಕ ವಿಚಾರವಾಗಿ ನಾವು ಈಗಾಗಲೇ ನುಡಿದಂತೆ ನಡೆದಿದ್ದೇವೆ. ಶಿಕ್ಷಕ ವೃಂದದವರು ವಿದ್ಯಾವಂತರು, ಪ್ರಜ್ಞಾವಂತರಿದ್ದಾರೆ. ನಮ್ಮ ಪಕ್ಷದ ಎಲ್ಲ ನಾಯಕರು ಒಗ್ಗಟ್ಟಿನಿಂದ ಈ ಚುನಾವಣೆ ಎದುರಿಸುತ್ತೇವೆ. ನಮ್ಮ ಅಭ್ಯರ್ಥಿ ಅನುಭವಿ. ತಮ್ಮ ಸ್ಥಾನವನ್ನು ತ್ಯಾಗ ಮಾಡಿ, ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಅವರಿಗೆ ನಾವು ಬೆಂಬಲ ನೀಡುತ್ತಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.







