ಕಳೆದ ವರ್ಷ ಅತಿವೃಷ್ಟಿಯ ಪರಿಹಾರಕ್ಕಾಗಿ ಕೇಂದ್ರಕ್ಕೆ ಪತ್ರ ಬರೆದಿದ್ದರೂ, ಪರಿಹಾರ ಕೊಟ್ಟಿಲ್ಲ : ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕಳೆದ ವರ್ಷ ಅತಿವೃಷ್ಟಿಯಿಂದ ಹಾನಿಗೊಂಡ ರೈತರಿಗೆ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಪರಿಹಾರ ನೀಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರದಿಂದ ಪತ್ರ ಬರೆದಿದ್ದರೂ, ಕೇಂದ್ರದಿಂದ ಸ್ಪಂದನೆ ದೊರಕಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ಗೃಹ ಸಚಿವ ಅಮಿತ್ ಶಾ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ನಾನೇ ಭೇಟಿ ಮಾಡಿ ಮನವಿ ಸಲ್ಲಿಸಿದ್ದರೂ, ಪರಿಹಾರ ದೊರಕಲಿಲ್ಲ. ಕೊನೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕಾದ ಪರಿಸ್ಥಿತಿ ಉಂಟಾಯಿತು ಎಂದು ಅವರು ತಿಳಿಸಿದರು.
ಬುಧವಾರ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸಾರ್ವಜನಿಕರ ಅಹವಾಲು ಆಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೇ.50 ರಷ್ಟು ಹೆಚ್ಚುವರಿ ಮಳೆಯಿಂದ ಬೆಳೆ ಹಾನಿಯಾಗಿದೆ. ಈಗಾಗಲೇ ಜಂಟಿ ಸಮೀಕ್ಷೆಗೆ ಸೂಚನೆ ನೀಡಲಾಗಿದ್ದು, ವರದಿ ಬಂದ ಬಳಿಕ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ರಾಜ್ಯದಾದ್ಯಂತ ಈ ವರ್ಷ ವಾಡಿಕೆಗಿಂತ ಶೇ.4 ರಷ್ಟು ಮಳೆಯಾಗಿದ್ದು, ಕೆಲವು ಭಾಗಗಳಲ್ಲಿ ಮಳೆ ಪ್ರಮಾಣ ಹೆಚ್ಚಿದೆ ಎಂದ ಅವರು, ಬೆಳೆಸಾಲ ಮನ್ನಾ ವಿಚಾರವಾಗಿ ಪ್ರಶ್ನಿಸಿದಾಗ “ಅದರ ಕುರಿತು ಪರಿಶೀಲಿಸಲಾಗುತ್ತದೆ” ಎಂದು ಉತ್ತರಿಸಿದರು.
2024-25ನೇ ಸಾಲಿನಲ್ಲಿ ಬೆಳೆ ವಿಮೆ ಯೋಜನೆಯಡಿ ಕಲಬುರಗಿ ಜಿಲ್ಲೆಗೆ 650 ಕೋಟಿ ರೂ. ಪರಿಹಾರ ದಾಖಲೆ ಪ್ರಮಾಣದಲ್ಲಿ ಒದಗಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ಜಂಟಿ ಸಮೀಕ್ಷೆ ಒಂದು ವಾರದಲ್ಲಿ ಪೂರ್ಣಗೊಳ್ಳಲಿದೆ. ವರದಿ ಬಂದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.
ವಿಜಯಪುರ ಜಿಲ್ಲೆಯ ಚಡಚಣ ಬ್ಯಾಂಕ್ ದರೋಡೆ ಪ್ರಕರಣ ಕುರಿತಾಗಿ ಪ್ರತಿಕ್ರಿಯಿಸಿದ ಅವರು, “ಜಿಲ್ಲೆಯ ಎಸ್.ಪಿ. ಅವರನ್ನು ಸಂಪರ್ಕಿಸಿ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ಬಂಧಿಸಲು ಸೂಚಿಸಿದ್ದೇನೆ” ಎಂದು ಸಿಎಂ ಸ್ಪಷ್ಟಪಡಿಸಿದರು.
ಈ ಬಾರಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ಕಳೆದ ಬಾರಿಗಿಂತ ಹೆಚ್ಚುವರಿ ಶಿಕ್ಷಕರನ್ನು ನೇಮಿಸಲಾಗಿದೆ. ಒಟ್ಟು 1.75 ಲಕ್ಷ ಶಿಕ್ಷಕರು ಈ ಕಾರ್ಯಕ್ಕೆ ನಿಯೋಜಿತರಾಗಿದ್ದಾರೆ ಎಂದು ಅವರು ಹೇಳಿದರು.
ಈ ವೇಳೆ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಡಾ.ಅಜಯ್ ಸಿಂಗ್, ಭೈರತಿ ಸುರೇಶ್, ಡಿ.ಸುಧಾಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.







