ದೀಪಾವಳಿ | ಕೆಎಸ್ಸಾರ್ಟಿಸಿಯಿಂದ 2,600 ಹೆಚ್ಚುವರಿ ಬಸ್ ವ್ಯವಸ್ಥೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ವಾರಾಂತ್ಯ, ನ.8ರಂದು ನರಕ ಚತುರ್ದಶಿ ಹಾಗೂ ನ.10ರಂದು ಬಲಿಪಾಡ್ಯಮಿ ದಿನಗಳಾಗಿರುವುದರಿಂದ ನ.6ರಿಂದ ನ.8ರ ವರೆಗೆ ಬೆಂಗಳೂರಿನಿಂದ ಹಾಗೂ ನ.10, ನ.11ರಂದು ರಾಜ್ಯ, ಅಂತರರಾಜ್ಯದ ವಿವಿಧ ಸ್ಥಳಗಳಿಂದ 2,600 ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್ಸಾರ್ಟಿಸಿ ತಿಳಿಸಿದೆ.
ಸದರಿ ವಾಹನಗಳನ್ನು ಕೆಂಪೇಗೌಡ ಬಸ್ ನಿಲ್ದಾಣ ಹಾಗೂ ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರ ಬಸ್ ನಿಲ್ದಾಣಗಳಿಂದ ಕಾರ್ಯಾಚರಣೆ ಮಾಡಲಾಗುವುದು. ಮುಂಗಡ ಕಾಯ್ದಿರಿಸಿದ ಹೆಚ್ಚುವರಿ ವಾಹನಗಳನ್ನು ಬಿಎಂಟಿಸಿ ಶಾಂತಿನಗರ, ವಿಜಯನಗರ, ಯಶವಂತಪುರ, ಜಯನಗರ, ಮಲ್ಲೇಶ್ವರಂ 18ನೇ ಕ್ರಾಸ್ ಬಸ್ ನಿಲ್ದಾಣ, ಬಸವೇಶ್ವರ ನಗರ ಬಸ್ ನಿಲ್ದಾಣ(ಶಾರದಾ ಕಾಲನಿ), ಇಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ, ಟಿನ್ ಫ್ಯಾಕ್ಟರಿ ಹಾಗೂ ಇನ್ನಿತರೆ ಬಸ್ ನಿಲ್ದಾಣಗಳಿಂದ ಕಾರ್ಯಾಚರಣೆ ಮಾಡಲಾಗುವುದು.
ಕೆಂಪೇಗೌಡ ಬಸ್ ನಿಲ್ದಾಣದಿಂದ ಉಡುಪಿ, ಕುಂದಾಪುರ, ಪುತ್ತೂರು, ಮಂಗಳೂರು, ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ದಾವಣಗೆರೆ, ಗೋಕರ್ಣ, ಹಾಸನ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಸಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಾಗುತ್ತದೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ. ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕೋಯಿಕೋಡ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.
www.ksrtc.karnataka.gov.in ವೆಬ್ಸೈಟ್ ಮೂಲಕ ಟಿಕೆಟ್ ಬುಕ್ ಮಾಡಬಹುದು. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್ನ್ನು ಒಂದೇಸಲ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು.
ಕರ್ನಾಟಕ ಹಾಗೂ ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್ ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ ಎಂದು ಕೆಎಸ್ಸಾರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.






