ಸಿಎಂ ಸೇರಿದಂತೆ 139 ಶಾಸಕರೂ ನನ್ನ ಬಲ; ಸಿದ್ದರಾಮಯ್ಯ ಅವರು ಶೇ.100ರಷ್ಟು ನನ್ನ ಜತೆಗಿದ್ದಾರೆ : ಡಿ.ಕೆ.ಶಿವಕುಮಾರ್

ಬೆಂಗಳೂರು : ‘ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. ಇಲ್ಲಿ ಎಲ್ಲವೂ ಸಾಧ್ಯ. One man with Courage makes a majority ಎಂಬುದನ್ನು ನಾನು ನಂಬಿದ್ದೇನೆ. ದೃಢವಾದ ನಿಲುವು, ಸಂಕಲ್ಪ ಹೊಂದಿದ್ದರೆ, ಒಬ್ಬನೇ ಸಾಕು. ಆತನ ಜೊತೆ 140 ಜನರೂ ಇರುತ್ತಾರೆ, ಇನ್ನೂ ಜಾಸ್ತಿನೂ ಆಗುತ್ತಾರೆ. ನೋಡೋಣ 2028ರಲ್ಲಿ ಏನಾಗುತ್ತದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಸೋಮವಾರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುವ ವೇಳೆ ವಿಪಕ್ಷ ನಾಯಕ ಆರ್.ಅಶೋಕ್ ‘ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪಕ್ಕೆ ತಿರುಗೇಟು ನೀಡಿದರು. ‘ಒಂದು ತಿಂಗಳಿಂದ ಡಿ.ಕೆ.ಶಿವಕುಮಾರ್ ಮಾತು, ಟ್ವೀಟ್‍ಗಳು ನೂರು ಅರ್ಥ ಬರುವಂತಿದ್ದು, ಎಲ್ಲರೂ ಗೊಂದಲಕ್ಕೆ ಒಳಗಾಗಿದ್ದಾರೆ’ ಎಂದು ಆರ್.ಅಶೋಕ್ ಉಲ್ಲೇಖಿಸಿದರು.
ಬಳಿಕ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ‘ಅಶೋಕ್ ಅವರೇ, ನೀವು ಹಿರಿಯ ರಾಜಕಾರಣಿ. ಯಾರು ಏನಾದರೂ ಮಾತನಾಡಲಿ, ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಾನು ವಿದ್ಯಾರ್ಥಿ ನಾಯಕನಿಂದ ಬೆಳೆದು ಬಂದವನು. ನನ್ನದೇ ಆದ ಮೌಲ್ಯಗಳನ್ನು ಪಾಲಿಸಿಕೊಂಡು ಬಂದಿದ್ದೇನೆ. ಪಕ್ಷ ನನಗೆ ಚಿಕ್ಕವಯಸ್ಸಿಗೆ ಟಿಕೆಟ್ ಕೊಟ್ಟಿದ್ದು, ಇಲ್ಲಿಯವರೆಗೂ ಬೆಳೆದಿದ್ದೇನೆ. ರಾಜಕೀಯದಲ್ಲಿ ಏಳು-ಬೀಳು ಸಹಜ. ನಾನು ಎಂತೆಂತಹವರ ಏಳು-ಬೀಳು ನೋಡಿದ್ದೇನೆ. ನಾನು ಬಿದ್ದಿದ್ದೇನೆ, ಎದ್ದಿದ್ದೇನೆ, ಜೈಲುವಾಸ ಎಲ್ಲವನ್ನೂ ಅನುಭವಿಸಿದ್ದೇನೆ. ಇನ್ನು ತಿಂಗಳು ಕಳೆದರೆ ನಾನು ಪಕ್ಷದ ಅಧ್ಯಕ್ಷನಾಗಿ 6 ವರ್ಷ ಪೂರ್ಣಗೊಳ್ಳುತ್ತದೆ’ ಎಂದರು.
‘ಸಿಎಂ ಸಿದ್ದರಾಮಯ್ಯ ಸೇರಿದಂತೆ 139 ಶಾಸಕರೂ ನನ್ನ ಬಲ. ಸಿದ್ದರಾಮಯ್ಯ ಅವರು ಶೇ.100ರಷ್ಟು ನನ್ನ ಜತೆಗಿದ್ದಾರೆ. ಇದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ. ನಾವಿಬ್ಬರೂ ಪರಸ್ಪರ ಕೈಜೋಡಿಸಿ, ಜತೆಯಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ, ಮುಂದೆಯೂ ಕೆಲಸ ಮಾಡುತ್ತೇವೆ. ನಾವು ಜನಕ್ಕೆ ಮಾತು ಕೊಟ್ಟಿದ್ದು, ಆ ಮಾತನ್ನು ಉಳಿಸಿಕೊಳ್ಳಲು ಕೆಲಸ ಮಾಡುತ್ತೇವೆ. ನಾವು ನುಡಿದಂತೆ ನಡೆಯುತ್ತಿದ್ದೇವೆ, ಮುಂದೆಯೂ ನಡೆಯುತ್ತೇವೆ. ಇದರಲ್ಲಿ ಯಾವುದೇ ಗೊಂದಲ ಬೇಡ. ಅವರ ಕಷ್ಟಕಾಲದಲ್ಲಿ ನಾನು ನಿಂತಿದ್ದೇನೆ, ಮುಂದೆಯೂ ನಿಲ್ಲುತ್ತೇನೆ. ಅವರು ಕಷ್ಟಕಾಲದಲ್ಲಿ ನನ್ನ ಜತೆ ನಿಲ್ಲಲಿದ್ದಾರೆ’ ಎಂದು ಹೇಳಿದರು.
‘ನಿಮ್ಮ ಟ್ವೀಟ್ ಅರ್ಥವೇನು’ ಎಂದು ಅಶೋಕ್ ಪುನಃ ಪ್ರಶ್ನಿಸಿದರು. ‘ನೀವು ಟ್ವೀಟ್ ಅನ್ನು ಯಾವ ರೀತಿ ಅರ್ಥ ಮಾಡಿಕೊಳ್ಳುತ್ತೀರಿ ಎಂಬುದು ನಿಮಗೆ ಬಿಟ್ಟ ವಿಚಾರ’ ಎಂದು ಹೇಳಿದರು. ಯಾರ್ಯಾರೋ ಮಾತನಾಡುವುದಕ್ಕೆ ನಾನು ಉತ್ತರ ನೀಡಲು ಆಗುವುದಿಲ್ಲ. ನಮ್ಮ ಪಕ್ಷದಲ್ಲಿ ಹಾಗೂ ನಿಮ್ಮ (ಬಿಜೆಪಿ) ಪಕ್ಷದಲ್ಲಿ ಸಂಖ್ಯಾಬಲಕ್ಕಿಂತ ಪಕ್ಷವೇ ತೀರ್ಮಾನ ಮಾಡುತ್ತದೆ. ನಿಮ್ಮ ಸರಕಾರದಲ್ಲಿ ಎಷ್ಟೋ ಸಿಎಂ ಬದಲಾದರು, ಸಚಿವ ಸಂಪುಟಗಳೇ ಬದಲಾದವು. ಹೀಗಾಗಿ ನಿಮ್ಮ ಮಾತಿಗೆ ನಾನು ಜಗ್ಗುವುದಿಲ್ಲ, ನೀವು ಸುಮ್ಮನೇ ತಲೆಕೆಡಿಸಿಕೊಳ್ಳಬೇಡಿ’ ಎಂದು ಶಿವಕುಮಾರ್ ವಿವರಣೆ ನೀಡಿದರು.







