ಹೊರಟ್ಟಿ ರಾಜೀನಾಮೆ ವಿಚಾರ: ರಾಜ್ಯಪಾಲರಿಗೆ ವಿವರಣೆ ನೀಡಲಾಗಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು : ಬಸವರಾಜ ಹೊರಟ್ಟಿ ಅವರಿಂದ ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿದ್ದು, ಈ ಬಗ್ಗೆ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸೋಮವಾರ ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭೇಟಿ ಬಳಿಕ ಸಂಪುಟ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಭಾಪತಿ ಸ್ಥಾನಕ್ಕೆ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರನ್ನು ಅಭ್ಯರ್ಥಿಯಾಗಿಸಲು ಸೂಚನೆ ನೀಡಿದ್ದಾರೆ. ಹೊರಟ್ಟಿಯವರು ಸಂತೋಷದಿಂದಲೇ ರಾಜೀನಾಮೆ ನೀಡಿದ್ದರು. ಆದರೆ, ಇದೀಗ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ ಎಂದು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದರು.
ಈ ವಿಚಾರದಲ್ಲಿ ಬಿಜೆಪಿಯು ಸಂವಿಧಾನ ಬಿಕ್ಕಟ್ಟು ಸೃಷ್ಟಿಸಲು ಯತ್ನಿಸುತ್ತಿದೆ. ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಳ್ಳಲು ವಿಪಕ್ಷಗಳು ಹೊರಟಿವೆ. ಈ ಸಂಬಂಧ ನಾನು ಮತ್ತು ಸಚಿವ ಯು.ಟಿ.ಖಾದರ್ ರಾಜ್ಯಪಾಲರನ್ನು ಭೇಟಿಯಾಗಿ ಹೊರಟ್ಟಿ ಅವರು ಸ್ವ-ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ. ಇಲ್ಲವಾಗಿದ್ದರೆ ಅವರ ಮೇಲೆ ಅವಿಶ್ವಾಸ ನಿರ್ಣಯ ಗೊತ್ತುವಳಿ ಮಂಡಿಸಲು ಮುಂದಾಗಿದ್ದರು. ಅದಕ್ಕಾಗಿ ಅವರೇ ಗೌರವಯುತವಾಗಿ ರಾಜೀನಾಮೆ ನೀಡಿದ್ದಾರೆ. ಅವರೇ ಟೈಪ್ ಮಾಡಿರುವ ರಾಜೀನಾಮೆ ಪಡೆದಿರುವುದಾಗಿ ರಾಜ್ಯಪಾಲರಿಗೆ ತಿಳಿಸಿದ್ದೇವೆ ಎಂದು ಅವರು ಹೇಳಿದರು.






