ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಅಬ್ದುಲ್ ಜಬ್ಬಾರ್ / ಡಿ.ಕೆ. ಶಿವಕುಮಾರ್
ಬೆಂಗಳೂರು : ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವಿವಾರ ಅಂಗೀಕರಿಸಿದ್ದಾರೆ.
‘ವಿಧಾನ ಪರಿಷತ್ ಸದಸ್ಯರು ಆಗಿರುವ ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ಘಟಕದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಸಮಿತಿಯನ್ನು ಶೀಘ್ರದಲ್ಲೆ ರಚನೆ ಮಾಡಲು ಕ್ರಮ ವಹಿಸಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಮುಸ್ಲಿಮ್ ಸಮುದಾಯದವರಿಗೆ ಟಿಕೆಟ್ ನೀಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಅಸಮಾಧಾನಗೊಂಡಿದ್ದ ಅಬ್ದುಲ್ ಜಬ್ಬಾರ್, ಉಪಚುನಾವಣೆ ಪ್ರಚಾರದಿಂದಲೂ ದೂರ ಉಳಿದಿದ್ದರು. ಆ ಹಿನ್ನೆಲೆಯಲ್ಲಿ ಪಕ್ಷದಲ್ಲಿನ ಮುಸ್ಲಿಮ್ ಮುಖಂಡರು ಅಬ್ದುಲ್ ಜಬ್ಬಾರ್ ವಿರುದ್ಧ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು.
ಹೀಗಾಗಿ ಬೇಸರಗೊಂಡಿದ್ದ ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿನ್ನೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಅಬ್ದುಲ್ ಜಬ್ಬಾರ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದು, ಆ ಸ್ಥಾನಕ್ಕೆ ಶೀಘ್ರದಲ್ಲೇ ಹೊಸ ಅಧ್ಯಕ್ಷ ಮತ್ತು ಪದಾಧಿಕಾರಿಗಳನ್ನು ನೇಮಕ ಮಾಡುವ ಸಾಧ್ಯತೆಗಳಿವೆ.






