ಮುಖ್ಯಮಂತ್ರಿ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (Photo:X/@DKShivakumar)
ಬೆಂಗಳೂರು: ಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸೋಮವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸ ಬಳಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, 140 ಶಾಸಕರು ಕೂಡ ನನ್ನ ಬೆಂಬಲಿಗರೇ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ನನಗೆ ಬೆಂಬಲವಾಗಿದ್ದಾರೆ. ನಾನು ಹಾಗೂ ಮುಖ್ಯಮಂತ್ರಿ ಏನು ಮಾತನಾಡಿದ್ದೇವೆ ಎಂದು ನಿಮಗೆ ಗೊತ್ತಿದೆಯಾ? ಎಂದು ಪ್ರಶ್ನಿಸಿದರು.
ರಾಹುಲ್ ಗಾಂಧಿ ಸಮ್ಮುಖದಲ್ಲಿ ನಾವು ಏನು ಮಾತನಾಡಿಕೊಂಡಿದ್ದೇವೆ, ಹೈಕಮಾಂಡ್ ಸಮ್ಮುಖದಲ್ಲಿ ಏನು ಮಾತನಾಡಿದ್ದೇವೆ, ಎಲ್ಲ ಕೂತು ಏನು ತೀರ್ಮಾನ ಮಾಡಿದ್ದೇವೆ ಎಂದು ನಮಗೆ ಗೊತ್ತಿದೆ. ಈ ವಿಚಾರವನ್ನು ನಿಮ್ಮ ಮುಂದೆ ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವೇ? ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಶಿವಕುಮಾರ್ ತಿಳಿಸಿದರು.
ದಿಲ್ಲಿಗೆ ಭೇಟಿ ನೀಡಿದ್ದರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ದಿಲ್ಲಿಗೆ ಹೋಗುವುದೇ ರಾಜಕೀಯ, ಪಕ್ಷ ಹಾಗೂ ಸರಕಾರದ ಕೆಲಸಗಳಿಗೆ. ಮಾಧ್ಯಮಗಳು ರಾಹುಲ್ ಗಾಂಧಿ ಭೇಟಿಯಾಗಿಲ್ಲ ಎಂದು ಬರೆದಿದ್ದೀರಿ. ಒಂದು ದಿನ ನಾವು ಜೊತೆಯಲ್ಲಿ ಕೂತು ಚರ್ಚೆ ಮಾಡಿರುವ ಫೋಟೋ ವರದಿ ಮಾಡಿದ್ದೀರಿ, ಮರುದಿನ ಭೇಟಿಯೆ ಆಗಿಲ್ಲ ಎಂದು ಹೇಳುತ್ತಿದ್ದೀರಿ. ಈ ವಿಚಾರದಲ್ಲಿ ಕಾಲ ಉತ್ತರ ನೀಡಲಿದೆ ಎಂದು ಹೇಳಿದ್ದೇನೆ. ಇದರ ಹೊರತಾಗಿ ನಾನು ಬೇರೆ ವಿಚಾರ ಚರ್ಚೆ ಮಾಡುವುದಿಲ್ಲ ಎಂದು ತಿಳಿಸಿದರು.
ಹೈಕಮಾಂಡ್ ಒಳ್ಳೆಯ ಸುದ್ದಿ ನೀಡಲಿದೆ ಎಂದು ನಿಮ್ಮ ಸಹೋದರ ಹೇಳಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ತಮ್ಮ, ನಮ್ಮ ಕಾರ್ಯಕರ್ತರು, ಮಾಧ್ಯಮಗಳು ಕೂಡ ಹೇಳುತ್ತಿವೆ” ಎಂದರು.
ರಾಜಕೀಯಕ್ಕಾಗಿ ದಾವೋಸ್ ಪ್ರವಾಸ ಕೈಬಿಟ್ಟಿರುವುದು ಸರಿಯಲ್ಲ ಎಂಬ ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, “ಅವರ ಮಾತಿನಲ್ಲಿ ಅರ್ಥವಿದೆ. ತಪ್ಪು ಎಂದು ನಾನು ಹೇಳುವುದಿಲ್ಲ. ನಾಳೆ ಬೆಳಗ್ಗೆ ಈ ಪ್ರಶ್ನೆ ಕೇಳಿ” ಎಂದು ಶಿವಕುಮಾರ್ ಉತ್ತರಿಸಿದರು.







