ನಿಗಮ-ಮಂಡಳಿಗಳಿಗೆ 428 ಮಂದಿ ನಿರ್ದೇಶಕರು, ಸದಸ್ಯರ ನೇಮಕಕ್ಕೆ ಸಿಎಂ ಸೂಚನೆ

ಬೆಂಗಳೂರು : ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮ, ಮಂಡಳಿಗಳು ಹಾಗೂ ಪ್ರಾಧಿಕಾರಿಗಳಿಗೆ ಆಡಳಿತಾತ್ಮಕ ಚಟುವಟಿಕೆಗಳನ್ನು ನಿರ್ವಹಿಸಲು ಅನುಕೂಲ ಆಗುವಂತೆ ಒಟ್ಟು 428ಮಂದಿ ನಿರ್ದೇಶಕರು ಹಾಗೂ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.
ಬುಧವಾರ ಈ ಸಂಬಂಧ ಸರಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವ ಸಿಎಂ ಡಿ.ಕೆ. ಶಿವಕುಮಾರ್ ಅವರು, ನಿಗಮ-ಮಂಡಳಿಗಳು ಹಾಗೂ ಪ್ರಾಧಿಕಾರಿಗಳಿಗೆ ನಿರ್ದೇಶಕರು ಹಾಗೂ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಆ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸರಕಾರದ ಜಂಟಿ ಕಾರ್ಯದರ್ಶಿ ಉಮಾ ಕೆ. ಅವರು, ಸಿಎಂ ಅನುಮೋದಿಸಿರುವ ಪಟ್ಟಿಯನ್ನು ತಮ್ಮ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಿಗಮ-ಮಂಡಳಿಗಳು ಹಾಗೂ ಪ್ರಾಧಿಕಾರಿಗಳಿಗೆ ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಬೇಕು ಎಂದು ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ಹೀಗಾಗಿ ಇನ್ನೂ ಒಂದು ಅಥವಾ ಎರಡು ದಿನಗಳ ಒಳಗಾಗಿ ಸರಕಾರದ ಅಧೀನದಲ್ಲಿನ ನಿಗಮ-ಮಂಡಳಿಗಳು ಹಾಗೂ ಪ್ರಾಧಿಕಾರಿಗಳಿಗೆ ಆಯಾ ಇಲಾಖೆಯ ಮುಖ್ಯಸ್ಥರು, ನಿರ್ದೇಶಕರು ಹಾಗೂ ಸದಸ್ಯರುಗಳನ್ನು ನೇಮಕ ಮಾಡಿ ಅಧಿಕೃತವಾಗಿ ಆದೇಶವನ್ನು ಹೊರಡಿಸುವ ಸಾಧ್ಯತೆಗಳಿವೆ.






